ಧಾರವಾಡ: ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಧಾರವಾಡ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕ ಇವರ ಸಹಯೋಗದೊಂದಿಗೆ ಧಾರವಾಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ 2021-2022ನೇ ಸಾಲಿನ ಉದ್ಘಾಟನಾ ಸಮಾರಂಭವನ್ನು ಇಂದು ಬೆಳಿಗ್ಗೆ ಆರ್. ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನಮ್ಮ ಆರೋಗ್ಯವನ್ನು ಸುರಕ್ಷಿತವಾಗಿಟ್ಟುಕೊಳ್ಳಲು ಕ್ರೀಡೆ ಮುಖ್ಯ. ಪ್ರತಿಯೊಬ್ಬರೂ ದಿನಕ್ಕೆ ಒಂದು ಗಂಟೆ ವ್ಯಾಯಾಮ, ಯೋಗ ಮಾಡುವುದು ಅಗತ್ಯ. ಇದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಕ್ರೀಡಾಕೂಟದಲ್ಲಿ ಎಲ್ಲಾ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕ್ರೀಯಾಶೀಲವಾಗಿ ಪಾಲ್ಗೊಳ್ಳುವುದು ಮುಖ್ಯ ಎಂದು ಹೇಳಿದರು.
ಖ್ಯಾತ ಹೃದಯ ರೋಗ ತಜ್ಞ ಡಾ.ರವಿವರ್ಮ ಜಿ. ಪಾಟೀಲ ಅವರು ಮಾತನಾಡಿ, ಮನುಷ್ಯನ ಕೊನೆಯ ಉಸಿರಿನವರೆಗೂ ಕೆಲಸ ಮಾಡುವ ಅಂಗ ಹೃದಯ. ಹೃದಯ ಬಡಿತ ಹೆಚ್ಚಾಗುಂತಹ ಯಾವುದಾದರೂ ಕೆಲಸವನ್ನು ಪ್ರತಿದಿನ 30 ನಿಮಿಷಗಳ ಕಾಲ ಮಾಡುವುದರಿಂದ ದೈಹಿಕ ಸದೃಡತೆಯನ್ನು ಕಾಪಾಡಿಕೊಳ್ಳಬಹುದು. ಪ್ರತಿಯೊಬ್ಬರು ಜೀವನಶೈಲಿ ಬದಲಾವಣೆ, ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕು ಎಂದು ಆರೋಗ್ಯದ ಕುರಿತು ಸಲಹೆ ನೀಡಿದರು.
ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ಧನಗೌಡರ ಪ್ರಾಸ್ಥಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಎಸ್.ಜಿ.ಸುಬ್ಬಾಪೂರಮಠ ಸ್ವಾಗತಿಸಿದರು. ಕ್ರೀಡಾ ಕಾರ್ಯದರ್ಶಿ ಮಲ್ಲಿಕಾರ್ಜುನ ಸೊಲಗಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ವೇದಿಕೆಯಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಈರಣ್ಣ ಜಡಿ, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯಾಧಿಕಾರಿ ಬಿ.ಸಿ. ಕರಿಗೌಡರ, ತಹಶೀಲ್ದಾರ ಸಂತೋಷ ಬಿರಾದಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ ಸರಶೆಟ್ಟಿ, ಗೌರವಾಧ್ಯಕ್ಷ ಆರ್.ಜಿ.ಲಿಂಗದಾಳ ಸೇರದಂತೆ ಇತರರು ಇದ್ದರು.
Kshetra Samachara
04/03/2022 07:48 pm