ಬೆಂಗಳೂರು: ಅಧಿಕಾರಿಗಳು ಸರ್ಕಾರದ ಮಾತು ಕೇಳುತ್ತಿಲ್ಲ ಎಂದಾದರೆ, ಹೇಗೆ ಕೆಲಸ ಮಾಡಬೇಕೆಂಬುದನ್ನು ಅವರಿಗೆ ನಾವೇ ಹೇಳಿಕೊಡುತ್ತೇವೆ ಎಂದು ಕರ್ನಾಟಕ ಹೈಕೋರ್ಟ್ ಅಧಿಕಾರಿಗಳಿಗೆ ಚಾಟಿ ಬೀಸಿದೆ.
ಬೀದರ್ ಜಿಲ್ಲೆಯಾದ್ಯಂತ ರಸ್ತೆ ಗುಂಡಿಗಳನ್ನು ಮುಚ್ಚುವ ಮತ್ತು ರಸ್ತೆಗಳನ್ನು ದುರಸ್ತಿಗೊಳಿಸುವ ವಿಚಾರವಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ಈ ಬಗ್ಗೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ಮೇಲೆ ಗರಂ ಆಗಿದೆ. ಬೀದರ್ ಜಿಲ್ಲೆಯಾದ್ಯಂತ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಬೇಕು ಮತ್ತು ಹಾಳಾದ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವದ್ದೆ 2019ರಲ್ಲಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಗುರುವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ಸರ್ಕಾರ ಪರ ವಕೀಲರು, ಮಳೆಗಾಲದ ಕಾರಣ, ರಸ್ತೆ ರಿಪೇರಿ ಕಾಮಗಾರಿ ನಡೆಸಲಾಗುತ್ತಿಲ್ಲ. ಹೀಗಾಗಿ ಮಳೆಗಾಲ ಮುಗಿದ ಕೂಡಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಸಮಜಾಯಿಷಿ ನೀಡಿದ್ದಾರೆ.
ಈ ವಾದಕ್ಕೆ ಅಸಮಧಾನ ವ್ಯಕ್ತಪಡಿಸಿದ ನ್ಯಾಯಪೀಠ, 2019ರಲ್ಲೇ ಅರ್ಜಿ ಸಲ್ಲಿಸಲಾಗಿದೆ. ನಾಲ್ಕು ವಾರಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು 2021ರ ಸೆ.20ರಂದು ಸರ್ಕಾರ ಭರವಸೆ ನೀಡಿತ್ತು. ಈಗ ಮತ್ತೇ ಸರ್ಕಾರ ಕಾಲಾವಕಾಶ ಕೇಳಿತ್ತಿದೆ. ಇಡೀ ಜಿಲ್ಲೆಯ ರಸ್ತೆಗಳು ಅತ್ಯಂತ ದುಸ್ಥಿತಿಯಲ್ಲಿವೆ ಎಂದು ಅರ್ಜಿದಾರರ ಪರ ವಕೀಲರು ಹೇಳುತ್ತಿದ್ದಾರೆ. ನಿಜಕ್ಕೂ ಇದು ಬೇಸರದ ಸಂಗತಿ ಎಂದು ಹೇಳಿತು.
ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸಿ ಅನಾಹುತಗಳು ಉಂಟಾದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಜಿಲ್ಲೆಯ ರಸ್ತೆಗಳಲ್ಲಿನ ಗುಂಡಿ ಮುಚ್ಚಿ, ಹಾಳಾದ ರಸ್ತೆಗಳನ್ನು ದುರಸ್ತಿಗೊಳಿಸಿ ಎಲ್ಲಾ ರಸ್ತೆಗಳನ್ನು ಸಂಚಾರಯೋಗ್ಯವನ್ನಾಗಿ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ ಹೈಕೋರ್ಟ್, ಕೆಲಸ ಆಗದಿದ್ದರೆ ಮುಂದಿನ ವಿಚಾರಣೆಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಮುಖ್ಯ ಇಂಜಿನಿಯರ್ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಎಂದು ತಾಕೀತು ಮಾಡಿ ವಿಚಾರಣೆಯನ್ನು 2022ರ ಜ.18ಕ್ಕೆ ಮುಂದೂಡಿದೆ.
PublicNext
12/11/2021 07:58 am