ಕೊಪ್ಪಳ: ಇದೇ ಅಕ್ಟೋಬರ್ 10ರಂದು ಕೊಪ್ಪಳಕ್ಕೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಗಮಿಸಲಿದ್ದು, ಅವರ ನೇತೃತ್ವದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ತಂಗಡಗಿ ಹೇಳಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಸಂಬಂಧ ಸಭೆ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 15 ರಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜೋಡೋ ಯಾತ್ರೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸೇರುತ್ತಾರೆ. ಈ ಹಿನ್ನಲೆಯಲ್ಲಿ ಕೊಪ್ಪಳದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಕೊಪ್ಪಳದಿಂದ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಭಾರತ್ ಜೊಡೋ ಯಾತ್ರೆಗೆ ಜನ ಸ್ವಯಂ ಪ್ರೇರಿತವಾಗಿ ಬರ್ತಿದ್ದಿದ್ದಾರೆ. ಇದ್ರಿಂದ ಬಿಜೆಪಿಯವರಿಗೆ ನಡುಕ ಶುರುವಾಗಿದೆ ಎಂದರು.
ಇನ್ನು ಅಕ್ಟೋಬರ್ 10ರಂದು ಸಿದ್ದರಾಮಯ್ಯನವರು ಮಧ್ಯಾಹ್ನ ಬಸಾಪುರ ಖಾಸಗಿ ವಿಮಾನ ನಿಲ್ದಾಣಕ್ಕೆ 3 ಗಂಟೆಗೆ ಬರಲಿದ್ದು, ಅಲ್ಲಿಯೇ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ತದನಂತರ ಶಿವಶಾಂತವೀರ ಕಲ್ಯಾಣ ಮಂಟಪದಲ್ಲಿ ಪ್ರಮುಖ ಕಾರ್ಯಕರ್ತರ ಪೂರ್ವಸಭೆ ಹಮ್ಮಿಕೊಳ್ಳಲಾಗಿದೆ. ಇದಾದ ಬಳಿಕ ಜಿಲ್ಲೆಯ ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರ ಜೊತೆ ಸಿದ್ದರಾಮಯ್ಯ ಅವರು ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ನಿವಾಸದಲ್ಲಿ ವಿಶೇಷ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
PublicNext
08/10/2022 07:58 pm