ಬೆಂಗಳೂರು: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಮತ್ತು ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರನ್ನು 'ಕಳಂಕಿತ ಅಧಿಕಾರಿ' ಮತ್ತು ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) 'ವಸೂಲಿ ಕೇಂದ್ರ' ಎಂದು ಹೇಳಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಇಂದು ವಿಚಾರಣೆ ನಡೆಸಿದ್ದಾರೆ.
ಎಸಿಬಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ. ಮಂಜುನಾಥ್ ಅವರು ತಮ್ಮ ವಿರುದ್ಧ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಬಳಸಿದ್ದ ಕಟುವಾದ ಅಭಿಪ್ರಾಯವನ್ನು ಪ್ರಶ್ನಿಸಿ ಪ್ರತ್ಯೇಕವಾಗಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದಿಗೆ ವಿಚಾರಣೆಯನ್ನು ಮುಂದೂಡಿತ್ತು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ, ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಯ ನಡವಳಿಕೆಗೂ ವಿಚಾರಣೆಯಲ್ಲಿರುವ ಪ್ರಕರಣಕ್ಕೂ ಸಂಬಂಧವಿಲ್ಲ. ಜಾಮೀನು ಅರ್ಜಿಯನ್ನು ಪರಿಗಣಿಸುವ ಬದಲು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂಬಂಧವಿಲ್ಲದ ಮತ್ತು ವ್ಯಾಪ್ತಿಯ ಹೊರಗಿನ ಇತರ ವಿಷಯಗಳ ಬಗ್ಗೆ ಗಮನಹರಿಸಿದ್ದಾರೆ ಎಂದು ಹೇಳಿದ್ದಾರೆ.
PublicNext
18/07/2022 02:39 pm