ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅರ್ನಬ್ ಗೋಸ್ವಾಮಿಗೆ ಸುಪ್ರೀಂನಲ್ಲಿ ಜಾಮೀನು ಮಂಜೂರು

ನವದೆಹಲಿ: ಇಂಟೀರಿಯರ್ ಡಿಸೈನರ್ ಹಾಗೂ ಅವರ ತಾಯಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಹಾಗೂ ಅವರ ತಾಯಿ ಆತ್ಮಹತ್ಯೆ ಪ್ರಕರಣದ ಸಂಬಂಧ ರಿಪಬ್ಲಿಕ್ ಟಿವಿ ಸಂಪಾದಕ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಜೈಲು ಸೇರಿದ್ದಾರೆ. ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅರ್ನಬ್ ಅವರ ವಕೀಲ ಹರೀಶ್ ಸಾಳ್ವೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ನಬ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಈ ಮೂಲಕ 50,000 ರೂ ವೈಯಕ್ತಿಕ ಬಾಂಡ್ ಆಧಾರದಲ್ಲಿ ಅರ್ನಬ್ ಅವರಿಗೆ ಜಾಮೀನು ನೀಡಲಾಗಿದೆ. ಅವರೊಂದಿಗೆ ಇತರೆ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಲಾಗಿದೆ. ಅರ್ನಬ್ ಮತ್ತು ಇತರರು ಪ್ರಕರಣದ ತನಿಖೆಗೆ ಸಹಕರಿಸಬೇಕು ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅವರ ನೇತೃತ್ವದ ನ್ಯಾಯಪೀಠವು ಸೂಚನೆ ನೀಡಿದೆ. ಜೊತೆಗೆ ಆದೇಶವನ್ನು ತಕ್ಷಣವೇ ಪಾಲಿಸುವಂತೆ ನೋಡಿಕೊಳ್ಳಲು ಮಹಾರಾಷ್ಟ್ರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿದೆ.

ರಾಜ್ಯ ಸರ್ಕಾರವು ಸಿದ್ಧಾಂತ ಮತ್ತು ಭಿನ್ನಾಭಿಪ್ರಾಯದ ಆಧಾರದ ಮೇಲೆ ಕೆಲವು ವ್ಯಕ್ತಿಗಳನ್ನು ಗುರಿಯಾಗಿಸಿರುವುದು ತೀರಾ ದುರದೃಷ್ಟಕರ ಎಂದ ಪೀಠ ಮಹಾರಾಷ್ಟ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ಅರ್ಜಿದಾರರ ಸಿದ್ಧಾಂತ ಏನೇ ಇರಲಿ. ರಾಜ್ಯ ಸರ್ಕಾರಗಳು ಹೀಗೆ ಓರ್ವ ವ್ಯಕ್ತಿಯನ್ನು ಗುರಿಯಾಗಿಸುವುದು ಸರಿಯಲ್ಲ. ಹೀಗೆ ಗುರಿಯಾಗಿಸಿದರೆ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಸುಪ್ರೀಂ ಕೋರ್ಟ್‌ ಇದೆ ಎನ್ನುವುದನ್ನು ಅರಿಯಬೇಕು’ ಎಂದು ಮಹಾ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

Edited By : Vijay Kumar
PublicNext

PublicNext

11/11/2020 04:57 pm

Cinque Terre

66.42 K

Cinque Terre

31