ನವದೆಹಲಿ: ಭೂ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ ನರವಣೆ ಅವರ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಜನರಲ್ ಮನೋಜ್ ಪಾಂಡೆ ಅವರು ನೇಮಕವಾಗಿದ್ದು, ಇಂದು ಅವರು 29ನೇ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು.
ಭಾರತದ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ಎಂಎಂ ನರವಣೆ ಅವರು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಲೆಫ್ಟಿನಲ್ ಜನರಲ್ ಮನೋಜ್ ಪಾಂಡೆ ಸೇನಾ ಸಿಬ್ಬಂದಿಯ ಮುಖ್ಯಸ್ಥರಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಭಾರತದ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಅವರ ಸಾವಿನ ಬಳಿಕ 2021ರ ಡಿಸೆಂಬರ್ ತಿಂಗಳಲ್ಲಿ ಭಾರತದ ಸೇನಾ ಮುಖ್ಯಸ್ಥರಾಗಿ ಎಂ.ಎಂ. ನರವಣೆ ಅಧಿಕಾರ ವಹಿಸಿಕೊಂಡಿದ್ದರು. ಅವರು ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಹೊಸ ಉತ್ತರಾಧಿಕಾರಿಯಾಗಿ ಜನರಲ್ ಮನೋಜ್ ಪಾಂಡೆ ಅವರನ್ನು ಘೋಷಿಸಲಾಗಿದೆ. ಅವರು ಇಂದು ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಜನರಲ್ ಪಾಂಡೆ, ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ನ ಮೊದಲ ಅಧಿಕಾರಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಫೆಬ್ರವರಿ 1ರಂದು ಸೇನೆಯ ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಪಾಂಡೆ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ವಲಯಗಳಲ್ಲಿ ವಾಸ್ತವ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ರಕ್ಷಣೆ ಮಾಡುವ ಜವಾಬ್ದಾರಿ ಹೊಂದಿದ್ದ ಪೂರ್ವ ಸೇನಾ ಕಮಾಂಡ್‌ನ ಮುಖ್ಯಸ್ಥರಾಗಿದ್ದರು.
ಚೀನಾ ಮತ್ತು ಪಾಕಿಸ್ತಾನದೊಂದಿಗಿನ ಗಡಿ ತಂಟೆ ಸೇರಿದಂತೆ ಅಸಂಖ್ಯಾತ ಭದ್ರತಾ ಸವಾಲುಗಳನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಜನರಲ್ ಪಾಂಡೆ ಅವರು ಸೇನೆಯ ನೂತನ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದ ಭಾರತದ ಮೊದಲ ರಕ್ಷಣಾ ಸಿಬ್ಬಂದಿ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರಿಂದ ತೆರವಾದ ಸ್ಥಾನ ಇನ್ನೂ ಖಾಲಿ ಇದೆ. ಆ ಸ್ಥಾನಕ್ಕೆ ಸರ್ಕಾರ ಇನ್ನೂ ಯಾರನ್ನೂ ನೇಮಕ ಮಾಡಿಲ್ಲ.
PublicNext
30/04/2022 04:15 pm