ದಾವಣಗೆರೆ: ಹಿಜಾಬ್ - ಕೇಸರಿ ಶಾಲ್ ಗಲಾಟೆ ನಡೆದ ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಐಜಿಪಿ ಸತೀಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಲಾಟೆಗೆ ಸಂಬಂಧಿಸಿದಂತೆಸ್ಥಳಗಳ ಪರಿಶೀಲನೆ ನಡೆಸಿದ ಅವರು ಕಾಲೇಜಿನ ಆಡಳಿತ ಮಂಡಳಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ. ರಿಷ್ಯಂತ್ ಜೊತೆಗೆ ಚರ್ಚೆ ನಡೆಸಿದರು. ಕಾನೂನು ಸುವ್ಯವಸ್ಥೆ ಕಾಪಾಡಿ. ಶಾಂತಿ ಭಂಗವಾಗದಂತೆ ನೋಡಿಕೊಳ್ಳಿ. ಗಲಭೆ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಐಜಿಪಿ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಹರಿಹರದಲ್ಲಿ ನಡೆದ ಗಲಾಟೆ ಬಗ್ಗೆ ಎಸ್ಪಿ ಸಿ.ಬಿ. ರಿಷ್ಯಂತ್ ಮಾಹಿತಿ ನೀಡಿದರು. ನಿನ್ನೆ ಕಾಲೇಜಿನಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ಒಟ್ಟು 6 ಪ್ರಕರಣ ದಾಖಲು ಮಾಡಲಾಗಿದೆ. ವಿದ್ಯಾರ್ಥಿಗಳು ಪರಸ್ಪರ ಗಲಾಟೆ ಸಂಬಂಧ ಒಂದು ಪ್ರಕರಣ, ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ 4 ಪ್ರಕರಣ ದಾಖಲಿಸಲಾಗಿದೆ. ಕಲ್ಲು ತೂರಾಟದಲ್ಲಿ ಗಾಯಗೊಂಡ ವ್ಯಕ್ತಿಯ ಒಂದು ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.
ಗಲಭೆ ಪ್ರಕರಣದಲ್ಲಿ ಅನಗತ್ಯವಾಗಿ ಯಾರನ್ನೂ ಬಂಧಿಸಲ್ಲ:
ಗಲಭೆ ಬಗ್ಗೆ ಸಾಕಷ್ಟು ವಿಡಿಯೋಗಳು ಲಭ್ಯವಾಗಿವೆ. ವಿಡಿಯೋ ಆಧರಿಸಿ ಗಲಭೆಯಲ್ಲಿ ಪಾಲ್ಗೊಂಡವರ ವಿರುದ್ಧ ಪ್ರಕರಣ ದಾಖಲಿಸುತ್ತೇವೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಬಗ್ಗೆಯೂ ಪ್ರಕರಣ ದಾಖಲಿಸಿದ್ದೇವೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದೇವೆ. ಈ ಕೃತ್ಯ ಪೂರ್ವ ನಿಯೋಜಿತವೋ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
PublicNext
09/02/2022 02:16 pm