ಮಂಗಳೂರು: ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘವು ನಗರದ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನಾ ಸಭೆ ಮಂಗಳವಾರ ನಡೆಸಿತು.
ಭಾರತೀಯ ಮಜ್ದೂರ್ ಸಂಘದ ರಾಜ್ಯ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಮಾತನಾಡಿ, ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ಸರಕಾರ ಬೀದಿಗಿಳಿಸಿದೆ. ಕಾರ್ಮಿಕರ ಹಿತ ಕಾಯುವುದು ನಮ್ಮ ಗುರಿ ಎನ್ನುವ ರಾಜ್ಯ ಸರ್ಕಾರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಗಮನವೇ ಹರಿಸಿಲ್ಲ. ಕೇವಲ ಘೋಷಣೆ, ಭರವಸೆ ನೀಡುತ್ತಿದೆ ಯಷ್ಟೇ ಎಂದು ಆರೋಪಿಸಿದರು.
ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದ್ದು, ಈ ಬಾರಿ ಘೋಷಣೆ ಭರವಸೆ ಬೇಡ ಎಂದು ಕಟುವಾಗಿ ನುಡಿದ ಅವರು, ನಮ್ಮ ಬೇಡಿಕೆಗಳನ್ನು ಈಡೇರಿಸಿ ಅವುಗಳನ್ನು ಅನುಷ್ಠಾನಕ್ಕೆ ತನ್ನಿ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಭಾರತೀಯ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷ ರತ್ನಾಕರ ದೇವಾಡಿಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್, ಜಿಲ್ಲಾ ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಭಾಗವಹಿಸಿದ್ದರು.
Kshetra Samachara
06/10/2020 06:46 pm