ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.
ಈ ದೂರಿನ ಆಧಾರದಲ್ಲಿ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ಫೇಸ್ ಬುಕ್, ವಾಟ್ಸ್ಆ್ಯಪ್ ಖಾತೆಗಳನ್ನು ತೆರೆದು ಅಪಪ್ರಚಾರ ಮಾಡಲಾಗುತ್ತಿದ್ದು, ಕೆಲಸದ ಆಮಿಷ ಒಡ್ಡಿ ಅಮಾಯಕ ಹಿಂದೂ ಯುವತಿಯರನ್ನು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಯುವಕರಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ನಕಲಿ ಖಾತೆಯೊಂದರಲ್ಲಿ ಹಿಂದೂ ಯುವತಿ ಸೋಗಿನಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಶರಣ್ ಪಂಪ್ ವೆಲ್ ಅವರ ಮಾನಹಾನಿ ಮಾಡುವ ಉದ್ದೇಶದಿಂದಲೇ ಈ ಅಪಪ್ರಚಾರ ಮಾಡಲಾಗಿದ್ದು, ನಕಲಿ ಸಾಮಾಜಿಕ ಜಾಲತಾಣಗಳ ಖಾತೆಯ ಮೂಲಕ ಅಪಪ್ರಚಾರ ನಡೆಸಿ ಮಾನಹಾನಿ ಮಾಡುವ ದೊಡ್ಡ ಜಾಲ ಸಕ್ರಿಯವಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕಾಗಿದೆ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಸಮಾಜದಲ್ಲಿ ಶಾಂತಿ ಕದಡುವ ಇಂತಹ ಪೋಸ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಹಿಂದೂ ಸಂಘಟನೆಗಳು ನೀಡಿವೆ. ಅಲ್ಲದೆ, ಈ ರೀತಿಯಲ್ಲಿ ಅಪಪ್ರಚಾರದಲ್ಲಿ ತೊಡಗಿರುವ ವಾಟ್ಸ್ಆ್ಯಪ್, ಫೇಸ್ ಬುಕ್ ಪೇಜ್ ಗಳ ಮೇಲೆ ದೂರು ದಾಖಲಿಸಿ, ತಕ್ಷಣ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
Kshetra Samachara
27/01/2021 04:40 pm