ಕೊಂಬಾರು: ಗ್ರಾಮದ ಅಭಿವೃದ್ಧಿಗೆ ಸಮಾಜದ ಎಲ್ಲರೂ ಸಂಘಟಿತರಾಗಿ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುವ ಮನೋಭಾವ ಮುಖ್ಯ ಮತ್ತು ಇಂತಹ ಪ್ರಯತ್ನ ಪತ್ರಕರ್ತರ ಗ್ರಾಮ ವಾಸ್ತವ್ಯ ಶಿಬಿರದಲ್ಲಿ ನಡೆದಿರುವುದನ್ನು ನಾನು ಗುರುತಿಸಿದ್ದೇನೆ ಎಂದು ಸಚಿವ ಎಸ್. ಅಂಗಾರ ಹೇಳಿದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಸಹಯೋಗದೊಂದಿಗೆ ದ.ಕ. ಜಿಲ್ಲಾಡಳಿತ, ದ.ಕ. ಜಿಪಂ, ಪೊಲೀಸ್ ಇಲಾಖೆ, ಕಡಬ ತಾಲೂಕು ಆಡಳಿತ, ತಾಪಂ ಮತ್ತು ಕೊಂಬಾರು ಗ್ರಾಪಂ ಸಹಭಾಗಿತ್ವದಲ್ಲಿ ಕೊಂಬಾರು ಶಾಲೆಯಲ್ಲಿ ಜ.31ರಂದು ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಶಿಬಿರಕ್ಕೆ ಸಹಕಾರ ನೀಡಿದವರಿಗೆ ಫೆ.7ರಂದು ನಡೆದ ಅಭಿವಂದನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮಾಭಿವೃದ್ಧಿಗೆ ಪೂರಕ ಕೆಲಸ ಮಾಡುವ ಯಾವುದೇ ಸಂಸ್ಥೆ ಗಳಿಗೆ ತಾನು ಬೆಂಬಲ ನೀಡುತ್ತೇನೆ. ಕೊಂಬಾರು, ಸಿರಿಬಾಗಿಲು ಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಅನುದಾನದ ಅಗತ್ಯವಿದೆ. ಈ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದ ಸಚಿವ ಅಂಗಾರ, ಗ್ರಾಮ ವಾಸ್ತವ್ಯಕ್ಕೆ ಶ್ರಮಿಸಿದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು, ಕಡಬ ತಾಲೂಕು ಪತ್ರಕರ್ತ ರ ಸಂಘದ ಸದಸ್ಯರನ್ನು ಸ್ಮರಣಿಕೆ ನೀಡಿ ಗೌರವಿಸಿದರು.
ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕಡಬ ತಾಪಂ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಜಿಪಂ ಸದಸ್ಯೆ ಆಶಾ ತಿಮ್ಮಪ್ಪ, ಪತ್ರಕರ್ತರ ಸಂಘದ ರಾಜ್ಯಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಕಡಬ ತಾಲೂಕು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ, ಕೊಂಬಾರು ಗ್ರಾಪಂ ಸದಸ್ಯರು, ಕಡಬ ಪತ್ರಕರ್ತರ ಸಂಘದ ಸದಸ್ಯರು ಉಪಸ್ಥಿತರಿದ್ದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು. ಕಡಬ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ನಾಗರಾಜ್ ಸ್ವಾಗತಿಸಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ನಿರೂಪಿಸಿದರು.
Kshetra Samachara
07/02/2021 11:04 pm