ಮಂಗಳೂರು: ಯುವಜನತೆಯ ಕೌಶಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಉದ್ಯೋಗ ಆಧಾರಿತ ಐಟಿಐ ಶಿಕ್ಷಣ ಸಂಸ್ಥೆಗಳನ್ನು ಪ್ರತಿ ಜಿಲ್ಲೆಯಲ್ಲಿ ಸ್ಥಾಪಿಸಲಾಗುವುದು ಎಂದು ರಾಜ್ಯ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಶ್ರೀಮಂತ ಬಾಳಾ ಸಾಹೇಬ ಪಾಟೀಲ್ ಹೇಳಿದ್ದಾರೆ.
ನಗರ ಹೊರವಲಯದ ಕೊಣಾಜೆಯಲ್ಲಿ ಗುರುವಾರ ವಿವಿಧ ನೂತನ ಕಾಮಗಾರಿಗಳ ಶಂಕುಸ್ಥಾಪನೆ, ನೂತನ ಕಟ್ಟಡಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯದ ನಾಲ್ಕು ವಿಭಾಗ ಮಟ್ಟದಲ್ಲಿ ಪಾಲಿಟೆಕ್ನಿಕ್, ಡಿಪ್ಲೊಮಾ ಕಾಲೇಜುಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.
ಇದೇ ಸಂದರ್ಭ ಸಚಿವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಣಾಜೆ ಮತ್ತು ಸರಕಾರಿ ಮುಸ್ಲಿಂ ವಸತಿ ಶಾಲೆ ಮಂಜನಾಡಿ ಇಲ್ಲಿನ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಕೊಣಾಜೆಯಲ್ಲಿ ನಿರ್ಮಿಸಲಾಗುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಫರಂಗಿಪೇಟೆ ಸಮೀಪದ ಪುದುವಿನಲ್ಲಿ ನಿರ್ಮಿಸಲಾಗುವ ಮೌಲಾನ ಆಝಾದ್ ಮಾದರಿ ಶಾಲೆ, ಬೋಳಿಯಾರ್ ನಲ್ಲಿ ನಿರ್ಮಿಸಲಾಗುವ ಮೌಲಾನ ಆಝಾದ್ ಮಾದರಿ ಶಾಲೆಗಳ ಕಟ್ಟಡಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಶಾಸಕ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಬೆಂಗಳೂರು ಅಧ್ಯಕ್ಷ ಸಂತೋಷ ರೈ ಬೋಳಿಯಾರ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ತಾಪಂ ಸದಸ್ಯರು, ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಮಂಜನಾಡಿ ಗ್ರಾಪಂ ಅಧ್ಯಕ್ಷೆ ನಸ್ರೀನಾ, ಕೊಣಾಜೆ ಗ್ರಾಪಂ ಅಧ್ಯಕ್ಷೆ ಚಂಚಲಾಕ್ಷಿ, ಉಪಾಧ್ಯಕ್ಷ ರಾಮಕೃಷ್ಣ ಪಟ್ಟೋರಿ, ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಟಿ.ಎಸ್.ಅಬ್ದುಲ್ಲ ಸಾಮಣಿಗೆ, ಕೊಣಾಜೆ ಗ್ರಾಪಂ ಮಾಜಿ ಅಧ್ಯಕ್ಷ ಶೌಕತ್ ಆಲಿ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
11/02/2021 10:42 pm