ಮೂಡುಬಿದಿರೆ: ಪುರಸಭೆ ವತಿಯಿಂದ ಶುಕ್ರವಾರ ಕನ್ನಡ ಭವನದಲ್ಲಿ ಸ್ವಚ್ಛ ಸರ್ವೇಕ್ಷಣೆಯ ಅಂಗವಾಗಿ ನಡೆಸಿದ ವಿವಿಧ ಸ್ಪರ್ದೆಗಳಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮತ್ತು ಸ್ವಚ್ಛತೆಗಾಗಿ ದುಡಿದವರು ಮತ್ತು ಸಂಘ-ಸಂಸ್ಥೆಗಳ ಗೌರವ ಸಮರ್ಪಣಾ ಕಾರ್ಯಕ್ರಮವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮರ್ಪಕ ಕಸ ವಿಲೇವಾರಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕಸದಿಂದಾಗಿ ದೇಶದಲ್ಲಿ ಹಲವು ಸಮಸ್ಯೆಗಳು ಉದ್ಭವಿಸುತ್ತವೆ ಎಂಬುದರ ಬಗ್ಗೆ ವಿವಿಧ ದೇಶಗಳ ವಿಜ್ಙಾನಿಗಳು ಈಗಾಗಲೇ ಹೇಳಿದ್ದಾರೆ. ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಜನರು ಕಸ ವಿಲೇವಾರಿಯಲ್ಲಿ ಪುರಸಭೆಗೆ ಸಹಕಾರ ನೀಡುತ್ತಿದ್ದಾರೆ. ಅಲ್ಲದೆ ಕಳೆದ ಒಂದೂವರೆ ವರ್ಷಗಳಿಂದ ಪುರಸಭಾ ಸದಸ್ಯರ ಮಾರ್ಗದರ್ಶನದಂತೆ 23 ವಾರ್ಡುಗಳಲ್ಲೂ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಿ ಯಶಸ್ವಿಗೊಳಿಸಿದ್ದಾರೆ ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ ಮಾತನಾಡಿದರು. ಪುರಸಭಾ ಉಪಾಧ್ಯಕ್ಷೆ ಸುಜಾತ ಶಶಿಧರ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಪುರಸಭೆಯ ಮುಖ್ಯಾಧಿಕಾರಿ ಇಂದು ಎಂ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಪರಿಸರ ಇಂಜಿನಿಯರ್ ಶಿಲ್ಪಾ ಕಾರ್ಯಕ್ರಮ ನಿರ್ವಹಿಸಿದರು. ಪುರಸಭಾ ಸದಸ್ಯರು ಸ್ವಚ್ಛತಾ ರಾಯಭಾರಿಗಳು, ವಿವಿಧ ಸಂಘ-ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದರು.
Kshetra Samachara
30/04/2022 03:45 pm