ಮೈಸೂರು: ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಾಕಷ್ಟು ಮುನ್ನಡೆ ಸಾಧಿಸುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯಾದ ಐಎಸ್‍ಎಂಸಿ 23 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬದ ಪ್ರಯುಕ್ತ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಮೈಸೂರು ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿಯಾಗಿ ಏರ್ಪಡಿಸಿದ್ದ ಕೈಗಾರಿಕಾ ದಸರಾ ಉದ್ಘಾಟಿಸಿ ಮಾತನಾಡಿದರು.
ಐಎಸ್‍ಎಂಸಿ ಕಂಪನಿಯು ಸುಮಾರು 23 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುತ್ತಿದ್ದು, ಸೆಮಿಕಂಡಕ್ಟರ್ ಪ್ಯಾಬ್ ಸ್ಥಾಪಿಸಲು ರಾಜ್ಯಸರ್ಕಾರೊಂದಿಗೆ ಎಂಒಯುಗೆ ಸಹಿ ಹಾಕಿದೆ. ಇದರಿಂದ ಈ ಭಾಗದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಶತಮಾನಗಳ ಹಿಂದೆ ಕೈಗಾರಿಕೆಗಳ ಸ್ಥಾಪನೆಗೆ ಮುನ್ನುಡಿ ಬರೆದ ಮೊದಲ ಮಹರಾಜರಾಜರೆಂದರೆ ನಾಲ್ವಡಿ ಕೃಷ್ಣರಾಜ ಒಡೆಯರ್. ಕರ್ನಾಟಕ ಇಂದು ಕೈಗಾರಿಕೆ, ಶಿಕ್ಷಣ, ಆರೋಗ್ಯ ನೀರಾವರಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಇಷ್ಟು ಸಾಧನೆ ಮಾಡಿದೆ ಎಂದರೆ ಅದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣ ಎಂದು ಮುಕ್ತ ಕಂಠದಿಂದ ಹೊಗಳಿದರು.
ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ನಮ್ಮ ಶಿಕ್ಷಣ ಸಂಸ್ಥೆ ಸೇರಿದಂತೆ ಮತ್ತಿತರ ಕಡೆ ಕಡ್ಡಾಯವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ವಿಶ್ವೇಶ್ವರಯ್ಯನವರ ಪ್ರತಿಮೆಗಳನ್ನ ಸ್ಥಾಪನೆ ಮಾಡಿ ಅವರ ಅದರ್ಶಗಳನ್ನು ಅನುಸರಿಸುತ್ತಿದ್ದೇವೆ ಎಂದು ಹೇಳಿದರು.
PublicNext
26/09/2022 04:17 pm