ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ "ಮಕ್ಕಳ ದಸರಾ ಕಲಾಥಾನ್"ಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪನವ್ರು ಚಾಲನೆ ನೀಡಿದರು.
ಈ ವೇಳೆ ಮಕ್ಕಳ ವೇಷಭೂಷಣಗಳಾದ ಬಸವಣ್ಣ, ರಾಣಿ ಚೆನ್ನಮ್ಮ, ಒನಕೆ ಓಬವ್ವ, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷ ಧರಿಸಿದ್ದ ಮಕ್ಕಳು ಕಾರ್ಯಕ್ರಮಕ್ಕೆ ಮೆರಗು ನೀಡಿದರು.
ಇದರ ಜೊತೆಗೆ ಪೂಜಾ ಕುಣಿತ, ಡೊಳ್ಳು ಕುಣಿತ, ಜಾನಪದ ನೃತ್ಯ, ಕಂಸಾಳೆ ನೃತ್ಯ, ಗಾರುಡಿ ಗೊಂಬೆ, ಹುಲಿವೇಷ, ವೀರಗಾಸೆ, ಬ್ಯಾಂಡ್ಸೆಟ್, ಸ್ಕೌಟ್ಸ್ ಮತ್ತು ಗೈಡ್ಸ್, ಎನ್.ಸಿ.ಸಿ, ಪರಿಸರ ಸಂರಕ್ಷಣೆ ವಿಷಯಗಳನ್ನೊಳಗೊಂಡ ವೈವಿಧ್ಯಮಯ ವೇಷಭೂಷಣದಲ್ಲಿ ಹಾಡುತ್ತಾ, ಕುಣಿಯುತ್ತಾ ಸಂಭ್ರಮಿಸುವ ಮೂಲಕ ಮೆರವಣಿಗೆಯಲ್ಲಿ ಸಾಗಿದರು. ಸಚಿವರೂ ಕೂಡ ಮಕ್ಕಳೊಂದಿಗೆ ಹೆಜ್ಜೆ ಹಾಕಿದರು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀವತ್ಸ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
PublicNext
04/10/2024 07:45 pm