ಮಲೆನಾಡಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಭದ್ರಾ ಡ್ಯಾಂ ಯಾವ ಕ್ಷಣದಲ್ಲಿಯಾದರೂ ಭರ್ತಿಯಾಗುವ ಸಾಧ್ಯತೆ ಇದೆ. ಒಂದೆಡೆ ಜಿಲ್ಲೆಯ ಜನರು ಹಾಗೂ ರೈತರಲ್ಲಿ ಸಂತಸ ತಂದಿದ್ದರೆ, ಮತ್ತೊಂದೆಡೆ ಪ್ರವಾಹ ಭೀತಿ ತಲೆದೋರಿದೆ. ಈಗಾಗಲೇ ಡ್ಯಾಂನಿಂದ ನೀರು ಹೊರಬಿಡಲಾಗಿದ್ದು, ಹೊನ್ನಾಳಿ ಹಾಗೂ ಹರಿಹರ ತಾಲೂಕಿನ ತಗ್ಗು ಪ್ರದೇಶಗಳಲ್ಲಿ ಆತಂಕ ಶುರುವಾಗಿದೆ. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ.
ತಗ್ಗು ಪ್ರದೇಶಗಳ ಜನರನ್ನು ಸ್ಥಳಾಂತರಿಸಿ ಸುರಕ್ಷಿತವಾಗಿಡಲು ಹಾಗೂ ಗಂಜಿ ಕೇಂದ್ರಗಳನ್ನು ಆರಂಭಿಸಲು ಈಗಾಗಲೇ ಗುರುತು ಮಾಡಲಾಗಿದೆ. ವಸತಿ ಮತ್ತು ಊಟದ ವ್ಯವಸ್ಥೆಗೆ ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಸುಮಾರು 113ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿವೆ. ಇವರಿಗೆ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಆದಷ್ಟು ಬೇಗ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಭದ್ರಾ ಡ್ಯಾಂ ನೀರಿನ ಮಟ್ಟ 184 ಅಡಿ ತಲುಪಿದ ಹಿನ್ನೆಲೆಯಲ್ಲಿ ಹೊನ್ನಾಳಿ- ಹರಿಹರ ಭಾಗದಲ್ಲಿ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚಾಗುತ್ತಿದೆ. ಹೊನ್ನಾಳಿ, ನ್ಯಾಮತಿ, ಹರಿಹರ ಭಾಗದ ಕೆಲ ಗ್ರಾಮಗಳು ಮುಳುಗುವ ಆತಂಕದಲ್ಲಿವೆ.
PublicNext
15/07/2022 03:22 pm