ಬೆಂಗಳೂರು: ನಿರೀಕ್ಷಿಸಿದಂತೆ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ಚಂಡಮಾರುತ ನಿರ್ಮಾಣವಾಗಿದ್ದು ನಿಕೋಬಾರ್ ದ್ವೀಪಗಳಲ್ಲಿ ಈಗಾಗಲೇ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮುಂದಿನ ದಿನಗಳಲ್ಲಿ ಚಂಡಮಾರುತ ತೀವ್ರವಾಗಲಿದ್ದು, ಒಂದೆರಡು ದಿನದಲ್ಲಿ ಚಂಡಮಾರು ವಾಯುವ್ಯ ದಿಕ್ಕಿನತ್ತ ಸಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮೇ 8 ( ಭಾನುವಾರ) ಮಧ್ಯಾಹ್ನದ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಒಡಿಶಾದತ್ತ ಮಾರುತಗಳು ಚಲಿಸಲಿದ್ದು, ಆ ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್ ಹಾಗೂ ಈಶಾನ್ಯದ ಬಹುತೇಕ ರಾಜ್ಯಗಳಲ್ಲಿ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆ ಆಗುವ ಮುನ್ಸೂಚನೆ ಇದೆ. ಚಂಡಮಾರುತ ಪರಿಣಾಮ ಗಂಟೆಗೆ 40 ರಿಂದ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಬಂಗಾಳ ಕೊಲ್ಲಿಯಲ್ಲಿನ ಚಂಡಮಾರುತದಿಂದ ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕೇರಳ ರಾಜ್ಯಗಳ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗುತ್ತಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ದಾವಣಗೆರೆಯಲ್ಲಿ ಮುಂದಿನ 4 ದಿನ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲೂ ಧಾರಾಕಾರವಾಗಿ ಮಳೆ ಬೀಳಲಿದೆ.
PublicNext
06/05/2022 10:28 pm