ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನವು ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದೆ. ಎರಡು ಪ್ರತ್ಯೇಕ ಘಟನೆಯಲ್ಲಿ ಭಾರತೀಯ ಸೈನ್ಯದ ಮೂವರು ಯೋಧರು ಹುತಾತ್ಮರಾಗಿದ್ದು, ಐವರು ಸೈನಿಕರು ಗಾಯಗೊಂಡಿದ್ದಾರೆ.
ಪಾಕ್ ಕೃತ್ಯದ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತೀಯ ಸೇನೆಯು, ಆದಷ್ಟು ಬೇಗ ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಲಾಗುವುದು. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ನೌಗಮ್ ಸೆಕ್ಟರ್ ಮೇಲೆ ಪಾಕಿಸ್ತಾನವು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ ಪೂಂಚ್ ಸೆಕ್ಟರ್ ಮೇಲೆ ನಡೆದ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾದರೆ, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಾಕಿಸ್ತಾನ ಸೇನೆಯು ಸೆಪ್ಟೆಂಬರ್‌ನಲ್ಲಿ 47 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಕಳೆದ ಎಂಟು ತಿಂಗಳಲ್ಲಿ ಪಾಕಿಸ್ತಾನದ 3,000ಕ್ಕೂ ಹೆಚ್ಚು ಕದನ ವಿರಾಮ ಉಲ್ಲಂಘನೆಗಳು ವರದಿಯಾಗಿವೆ. ಈ ಪ್ರಮಾಣವು ಕಳೆದ 17 ವರ್ಷಗಳಲ್ಲಿಯೇ ಅತಿ ಹೆಚ್ಚಾಗಿದೆ.
PublicNext
01/10/2020 04:24 pm