ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎತ್ತಿಗೆ ಜ್ವರ ಬಂದ್ರೆ ಕೋಣಕ್ಕೆ ಬರೆ: ಶಿಕ್ಷಕರಿಗೆ ರಜೆ ನೀಡದ್ದಕ್ಕೆ ಸರ್ಕಾರದ ವಿರುದ್ಧ ಎಚ್‍ಡಿಕೆ ಕಿಡಿ

ಬೆಂಗಳೂರು: ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಶಿಕ್ಷಕರಿಗೆ ಮಧ್ಯಂತರ ರಜೆಯನ್ನು ನೀಡದ್ದಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಣಿ ಟ್ವೀಟ್ ಮಾಡುವ ಅವರು, “ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ” ಎಂದು ಗುಡುಗಿದ್ದಾರೆ.

ಈ ವರ್ಷದ ಅಕ್ಟೋಬರ್ 3ರಿಂದ 26ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನು? ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಕೊರೊನಾ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರ್ಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ ಎಂದು ಪ್ರಶ್ನಿಸಿದ್ದಾರೆ.

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರ್ಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ ಶಾಪಕ್ಕೆ ಗುರಿಯಾಗುತ್ತಿದೆ. ‘ಹರ ಮುನಿದರೂ ಗುರು ಕಾಯ್ವನು’ ಎಂಬುದನ್ನು ಸರ್ಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

Edited By : Vijay Kumar
PublicNext

PublicNext

11/10/2020 12:22 pm

Cinque Terre

114.07 K

Cinque Terre

2

ಸಂಬಂಧಿತ ಸುದ್ದಿ