ಚೆನ್ನೈ: ಸುಮಾರು ಐದು ದಶಕದ ಬಳಿಕ ಕರುಣಾನಿಧಿ, ಎಂಜಿಆರ್, ಜಯಲಲಿತಾ ಇಲ್ಲದ ತಮಿಳುನಾಡಿನ ಮೊದಲ ಚುನಾವಣೆ ಕಾವು ಹೆಚ್ಚಾಗುತ್ತಿದೆ.
ಇದರ ಬೆನ್ನಲ್ಲೆ ಹಿರಿಯ ನಟಿ ಹಾಗೂ ಕಾಂಗ್ರೆಸ್ ನಾಯಕಿ ಖುಷ್ಬೂ ಸುಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ದಟ್ಟವಾಗಿ ಕೇಳಿಬರುತ್ತಿದೆ.
2014ರ ಸೆಪ್ಟೆಂಬರ್ ನಲ್ಲಿ ಡಿಎಂಕೆ ಪಕ್ಷ ತೊರೆದಿದ್ದ ಖುಷ್ಬೂ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
ಆದರೆ ಒಂದೆರೆಡು ತಿಂಗಳಿಂದ ಖುಷ್ಬೂ ಅವರು ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಊಹಾಪೋಹ ಹೆಚ್ಚಾಗಿದೆ.
ಕಳೆದವಾರ ಖುಷ್ಬೂ ಅವರು ಬಿಜೆಪಿ ಸೇರ್ಪಡೆ ವಿಚಾರವನ್ನು ತಳ್ಳಿ ಹಾಕಿದ್ದರು.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬೂ ಅವರು ಭಾನುವಾರ ರಾತ್ರಿ ಕಾಂಗ್ರೆಸ್ ಗೆ ವಿದಾಯ ಹೇಳಿದ್ದು, ಇಂದು ಬೆಳಿಗ್ಗೆ ಅವರು ಬಿಜೆಪಿಗೆ ಸೇರಲಿದ್ದಾರೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿದ್ದು, ಇಂದು ದೆಹಲಿಗೆ ತೆರಳಲಿರುವ ಖುಷ್ಬೂ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಇತರೆ ಹಿರಿಯ ನಾಯಕರನ್ನು ಭೇಟಿ ಮಾಡಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.
ಈಗಾಗಲೇ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ತೆರಳಿರುವ ಖುಷ್ಬೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
PublicNext
12/10/2020 07:52 am