ಬೆಂಗಳೂರು: ವೈಜ್ಞಾನಿಕವಾಗಿ ಅಧ್ಯಯನ ಮಾಡದೇ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಮಾಡಿರುವುದು ಸಮಾಜ ವಿರೋಧಿ ಮಾತ್ರವಲ್ಲ. ಪ್ರಜಾಪ್ರಭುತ್ವ ವಿರೋಧಿ ತೀರ್ಮಾನವೂ ಹೌದು. ಕಾರ್ಯಸಾಧನೆಯ ಬಲದಿಂದ ಚುನಾವಣೆಗಳನ್ನು ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ, ಇಂತಹ ಅಗ್ಗದ ಕುತಂತ್ರಗಳನ್ನು ಮಾಡಿ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಡತನದ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ, ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ ಎಂದ ಸಿದ್ದರಾಮಯ್ಯ ಸವಾಲು ಹಾಕಿದರು.
ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಬಡತನ ಎಂಬುದು ಜಾತಿ-ಧರ್ಮಗಳನ್ನು ಮೀರಿದ್ದು. ಕೇವಲ ತಳ ಸಮುದಾಯಗಳಲ್ಲಿ ಅಷ್ಟೇ ಅಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ರೂಪಿಸುವ ಕಾರ್ಯಕ್ರಮಗಳಿಗೆ ನಮ್ಮಿಂದ ಸ್ವಾಗತ ಇದೆ. ಆದರೆ ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲ್ಲಕ ಬುದ್ಧಿಯ ಕಸರತ್ತುಗಳನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
PublicNext
18/11/2020 04:57 pm