ನವದೆಹಲಿ: ವಿರೋಧ ಮಾಡಬೇಕೆಂಬ ಉದ್ದೇಶಕ್ಕಾಗಿಯೇ ಕಾಂಗ್ರೆಸ್ ಮತ್ತು ವಿಪಕ್ಷಗಳು ಕೃಷಿ ಮಸೂದೆಯನ್ನು ವಿರೋಧಿಸುತ್ತಿದ್ದಾರೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2019ರ ಕಾಂಗ್ರೆಸ್ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ(ಎಪಿಎಂಸಿ) ಯನ್ನು ರದ್ದುಪಡಿಸುವ ಅಥವಾ ತಿದ್ದುಪಡಿ ಮಾಡುವ ಭರವಸೆ ನೀಡಲಾಗಿತ್ತು. ಬಿಜೆಪಿ ಈಗ ಮಸೂದೆ ತಂದಿದ್ದಕ್ಕೆ ವಿರೋಧಿಸುವ ಮೂಲಕ ಕಾಂಗ್ರೆಸ್ ದ್ವಿಮುಖ ನೀತಿಯನ್ನು ತೋರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಯುಪಿಎ ಅವಧಿಯಲ್ಲಿ ಕೃಷಿ ಅಭಿವೃದ್ಧಿಗೆ ಕಾಂಗ್ರೆಸ್ ಏನು ಮಾಡಲು ಮುಂದಾಗಿತ್ತೋ ಅದನ್ನೇ ಮೋದಿ ಸರ್ಕಾರ ಜಾರಿಗೆ ತರಲು ಮುಂದಾಗಿದೆ. ವಿರೋಧ ಪಕ್ಷಗಳು ಚುನಾವಣೆಯಲ್ಲಿ ಸೋತಿವೆ. ಈಗ ಪ್ರತಿಭಟನೆಗಳಿಗೆ ಬೆಂಬಲ ನೀಡುವ ಮೂಲಕ ಅಸ್ವಿತ್ವ ಉಳಿಸಿಕೊಳ್ಳಲು ಮುಂದಾಗಿವೆ ಎಂದು ಕಿಡಿಕಾರಿದರು.
ಎಪಿಎಂಸಿ ಕಾಯ್ದೆಯನ್ನು ರದ್ದುಪಡಿಸುತ್ತೇವೆ. ರಫ್ತು ಸೇರಿದಂತೆ ಕೃಷಿ ಉತ್ಪನ್ನಗಳ ವ್ಯಾಪಾರವನ್ನು ಎಲ್ಲಾ ನಿರ್ಬಂಧಗಳಿಂದ ಮುಕ್ತಗೊಳಿಸುತ್ತೇವೆ ಎಂದು 2019 ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಿತ್ತು. ಈಗ ನಾವು ಜಾರಿಗೆ ತಂದಿದ್ದಕ್ಕೆ ವಿರೋಧಿಸುತ್ತಿದೆ ಎಂದು ಹೇಳಿದರು.
ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಭಾನುವಾರ ಶರದ್ ಪವಾರ್ ಪತ್ರವನ್ನು ಟ್ವೀಟ್ ಮಾಡಿ, 2010ರಲ್ಲಿ ಕೃಷಿಯಲ್ಲಿ ಖಾಸಗಿ ವಲಯಗಳು ಇರಬೇಕೆಂದು ಬೇಡಿಕೆ ಇಟ್ಟು ಪತ್ರ ಬರೆದಿದ್ದರು. ಆದರೆ ಈಗ ತನ್ನ ಹೇಳಿಕೆಯನ್ನು ಬದಲಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
PublicNext
07/12/2020 04:47 pm