ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ರಾಜಕೀಯ ನಿವೃತ್ತಿಯ ಬಗ್ಗೆ ಸುಳಿವು ನೀಡಿದ್ರಾ ಎನ್ನುವ ಚರ್ಚೆ ಶುರುವಾಗಿದೆ.
ಹೌದು. ಮಧ್ಯಪ್ರದೇಶದ ಚಿನ್ ದ್ವಾರಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಮಲ್ ನಾಥ್, ನಾನು ವಿಶ್ರಾಂತಿ ತೆಗೆದುಕೊಳ್ಳಲು ಸಿದ್ಧನಾಗಿದ್ದೇನೆ. ನನಗೆ ಇನ್ನು ಯಾವುದೇ ಹುದ್ದೆ ಬೇಕೆಂಬ ಆಸೆ ಇಲ್ಲ. ಈಗಾಗಲೇ ನಾನು ಬೇಕಾದ ಹುದ್ದೆಗಳನ್ನು ಅಲಂಕರಿಸಿದ್ದು, ಇನ್ನು ಮುಂದೆ ಮನೆಯಲ್ಲಿರಲು ಸಿದ್ಧ ಎಂದು ಹೇಳಿದ್ದಾರೆ.
ಕಮಲ್ ನಾಥ್, ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಮಾತ್ರವಲ್ಲ, ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಕೂಡಾ ಆಗಿದ್ದಾರೆ. ಮಧ್ಯಪ್ರದೇಶದ ರಾಜರಾಜಕಾರಣದಲ್ಲಿ ಹೊಸ ಮುಖಕ್ಕೆ ಅವಕಾಶ ನೀಡಲು ಹಾದಿಯನ್ನು ಸುಗಮಗೊಳಿಸಬೇಕು ಎಂಬುದಾಗಿ ಕಾಂಗ್ರೆಸ್ ಹೈಕಮಾಂಡ್ ಕಮಲ್ ನಾಥ್ ಮೇಲೆ ಒತ್ತಡ ಹೇರುತ್ತಲೇ ಇದೆ.
ಇತ್ತೀಚೆಗೆ 28 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತೀವ್ರ ಮುಖಭಂಗ ಅನುಭವಿಸಿತ್ತು. ಭಾರತೀಯ ಜನತಾ ಪಕ್ಷ 19 ಸ್ಥಾನಗಳಲ್ಲಿ, ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ವೇಳೆ ಎಐಸಿಸಿ ಸದಸ್ಯ ಹರ್ಪಾಲ್ ಸಿಂಗ್ ಠಾಕೂರ್, ಮಧ್ಯಪ್ರದೇಶ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ಸೇರಿದಂತೆ ಎರಡು ಹುದ್ದೆಯನ್ನು ಅಲಂಕರಿಸಿರುವ ಕಮಲ್ ನಾಥ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು.
PublicNext
14/12/2020 07:05 pm