ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರಾಷ್ಟ್ರಪತಿ ಭವನಕ್ಕೆ ಪಾದಯಾತ್ರೆ ನಡೆಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೃಷಿ ಕಾಯ್ದೆ ಜಾರಿಯನ್ನು ತಡೆಹಿಡಿಯಲು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಆಗ್ರಹಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ರಾಷ್ಟ್ರಪತಿ ಭವನಕ್ಕೆ ಪಾದಯಾತ್ರೆ ಹಮ್ಮಿಕೊಂಡಿದೆ. ದೆಹಲಿಯ ವಿಜಯ್ ಚೌಕ್‌ನಿಂದ ಹೊರಟ ಕಾಂಗ್ರೆಸ್ ಪಾದಯಾತ್ರೆಯನ್ನು ದೆಹಲಿ ಪೊಲೀಸರು ತಡೆದಿದ್ದಾರೆ.
ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ಅವಕಾಶವಿಲ್ಲ ಎಂದು ಪೊಲೀಸರು ಮೊದಲೇ ತಿಳಿಸಿದ್ದರು. ಆದರೂ ಕಾಂಗ್ರೆಸ್ ಪಾದಯಾತ್ರೆಗೆ ಕೈಗೊಂಡಿದೆ. ಹೀಗಾಗಿ ರಾಷ್ಟ್ರಪತಿ ಭವನದ ಮಾರ್ಗ ಮಧ್ಯೆಯೇ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತಲ್ಲದೇ, ಪೊಲೀಸರ ಕ್ರಮಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಪೊಲೀಸರು ಕಾಂಗ್ರೆಸ್‌ನ ಮೂವರು ನಾಯಕರಿಗೆ ರಾಷ್ಟ್ರಪತಿ ಭವನದೊಳಕ್ಕೆ ಪ್ರವೇಶಿಸಲು ಅನುಮತಿ ನೀಡಿದ್ದಾರೆ.
PublicNext
24/12/2020 12:57 pm