ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಇಂದು ನಡೆದ ಸಿಬಿಐ ದಾಳಿಯನ್ನು ಖಂಡಿಸಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಗುಡುಗಿದ್ದಾರೆ.
ಇದೇ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಬಿಜೆಪಿ ದ್ವೇಷ ರಾಜಕಾರಣ ಮಾಡುವುದು ಹೊಸತೇನಲ್ಲ. ಈ ಮೂಲಕ ಸಾರ್ವಜನಿಕರ ಗಮನ ಸೆಳೆಯುವುದನ್ನು ಆಗಾಗ ಮಾಡುತ್ತಲೇ ಇರುತ್ತದೆ. ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ನಡೆದಿರುವ ಸಿಬಿಐ ದಾಳಿ ಅದಕ್ಕೆ ತಾಜಾ ಉದಾಹರಣೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸುವ ಮೂಲಕ ಆರ್ಆರ್ ನಗರ ಮತ್ತು ಶಿರಾ ಉಪಚುನಾವಣೆಯ ವೇಳೆ ಮತದಾರರ ಗಮನವನ್ನು ತನ್ನತ್ತ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಾವು ಉಪಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬಾರದೆಂದು ಈ ದಾಳಿ ನಡೆಸಿರುವ ಬಿಜೆಪಿಯ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಇದು ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ' ಎಂದು ಆರೋಪಿಸಿದ್ದಾರೆ.
PublicNext
05/10/2020 04:42 pm