ಬೆಂಗಳೂರು : ಇಂದು ಬೆಳ್ಳಂ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಡಿಕೆ ಕುಟುಂಬಕ್ಕೆ ಶಾಕ್ ಕೊಟ್ಟಿದ್ದಾರೆ.
ಹೀಗೆ ಏಕಾಏಕಿ ದಾಳಿ ನಡೆಸಿರುವುದನ್ನು ಖಂಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಇದು ಮೋದಿ ಸರ್ಕಾರದ ಪಿತೂರಿ ಎಂದಿದ್ದಾರೆ.
ಟ್ವೀಟ್ ಮೂಲಕ ಗರಂ ಆದ ಸಿದ್ದರಾಮಯ್ಯ ಸಿಬಿಐ ರೇಡ್ ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ. ರಾಜಕೀಯ ದುಷ್ಟತನದ ಪರಮಾವಧಿ” ಎಂದು ಖಂಡಿಸಿದ್ದಾರೆ.
ಅಷ್ಟೇ ಅಲ್ಲದೇ “ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಸಿದ್ದು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್ 3ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಡಿಕೆಶಿ ಜೈಲು ಸೇರಿದ್ದರು.
ಇದೀಗ ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿ ಶೋಧಕಾರ್ಯ ನಡೆಸುತ್ತಿದ್ದಾರೆ.
PublicNext
05/10/2020 12:22 pm