ಕೋಲ್ಕತ್ತಾ: ಬೈಕಿನಲ್ಲಿ ಬಂದ ದುಷ್ಕರ್ಮಿಗಳು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಾಂಬ್, ಗುಂಡಿನ ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಪಶ್ಚಿಮ ಮೇದಿನಿಪುರ ಜಿಲ್ಲೆಯ ಅಭಿರಾಂಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ದುಷ್ಕರ್ಮಿಗಳು ಬೈಕಿನಲ್ಲಿ ಬಂದು ಶೌಭಿಕ್ ದೋಲುಯಿ (24) ಮತ್ತು ಕಾರ್ಯಕರ್ತರ ಮೇಲೆ ಬಾಂಬ್ ಎಸೆದಿದ್ದಾರೆ. ಅಷ್ಟೇ ಅಲ್ಲದೆ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗುವ ಮೊದಲು ಶೌಭಿಕ್ ಮೇಲೆ ಗುಂಡು ಕೂಡ ಹಾರಿಸಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಶೌಭಿಕ್ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳುಗಳನ್ನು ಖರಗ್‌ಪುರದ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೇದಿನಿಪುರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಟಿಎಂಸಿ ನಾಯಕರು ಈ ದಾಳಿಯಲ್ಲಿ ಬಿಜೆಪಿಯ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.
PublicNext
24/02/2021 11:07 am