ಬೆಂಗಳೂರು: ಭ್ರಷ್ಟಾಚಾರ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಮತ್ತು ಆಪ್ತರ ವಿರುದ್ಧದ ಖಾಸಗಿ ದೂರನ್ನು ವಜಾಗೊಳಿಸಿರುವ ಜನಪ್ರತಿನಿಧಿಗಳ ವಿಚಾರಣಾ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೂರುದಾರ ಟಿ.ಜೆ ಅಬ್ರಹಾಂ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಜನ ಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಹಾಗೂ ಖಾಸಗಿ ದೂರಿನಲ್ಲಿ ಮಾಡಲಾದ ಆರೋಪಗಳ ಕುರಿತು ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.
ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಅರ್ಜಿಯಲ್ಲಿ ತಿಳಿಸಿರುವ ಅಂಶಗಳ ಕುರಿತು ಮೊದಲಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿತ್ತು. ಕಳೆದ ಶನಿವಾರ ಆ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಅರ್ಜಿಯನ್ನು ತಕರಾರು ಅರ್ಜಿಯಾಗಿ ಮಾರ್ಪಡಿಸಿ ಸಂಬಂಧಪಟ್ಟ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸಲು ರಿಜಿಸ್ಟಾರ್ಗೆ ಸೂಚಿಸಿದೆ. ಹೀಗಾಗಿ, ಆ ಅರ್ಜಿಯನ್ನು ಕೂಡ ಈ ಕ್ರಿಮಿನಲ್ ಅರ್ಜಿಯೊಂದಿಗೆ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.
ಮನವಿ ಪುರಸ್ಕರಿಸಿದ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಪೀಠ, ವಿಭಾಗೀಯ ಪೀಠದ ಸೂಚನೆಯಂತೆ ಮಾರ್ಪಡಿಸಿದ ತಕರಾರು ಅರ್ಜಿಯನ್ನು ಈ ಕ್ರಿಮಿನಲ್ ಅರ್ಜಿಯೊಂದಿಗೆ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಿಗೆ ಸೂಚಿಸಿ, ವಿಚಾರಣೆ ಮುಂದೂಡಿತು.
PublicNext
02/08/2021 10:24 pm