ನವದೆಹಲಿ: ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚಿಸಲು ತಾವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ರಾಜ್ಯದ ರಾಯಭಾರಿ ಕಚೇರಿ ಎಂದೇ ಬಣ್ಣಿಸಲಾಗುವ ಹೊಸದಿಲ್ಲಿಯ ಕರ್ನಾಟಕ ಭವನ-1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಸೂಪರ್ ಮುಖ್ಯಮಂತ್ರಿ ಎಂದು ಬಣ್ಣಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿದ ಬಿಎಸ್‍ವೈ, "ವಿಜಯೇಂದ್ರ ಬಿಜೆಪಿಯಲ್ಲಿ ಉಪಾಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಯೇ ಹೊರತು, ರಾಜ್ಯ ಸರ್ಕಾರದ ಯಾವುದೇ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ" ಎಂದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು :ಅಂದು ಹೆಚ್.ಡಿ.ಕುಮಾರಸ್ವಾಮಿ ಅವರು ನನ್ನನ್ನು ಭೇಟಿ ಮಾಡಿ ತಮ್ಮ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಕೆಲವು ಕಾಮಗಾರಿಗಳ ಒಪ್ಪಿಗೆ ಕೇಳಿದ್ದಾರೆ. ಇದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಇಂತಹ ವಿಷಯಗಳಲ್ಲಿ ಅನಗತ್ಯ ಊಹಾಪೋಹ ಬೇಡ" ಎಂದು ಸ್ಪಷ್ಟನೆ ನೀಡಿದರು.
PublicNext
18/09/2020 04:21 pm