ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳ ಹದಿ ಹರೆಯದ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್‌ಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಸಂಪುಟ ಸಭೆಯ ಬಳಿಕ ಮಾತನಾಡಿದ ಸಚಿವರು, 'ಶುಚಿ' ಕಾರ್ಯಕ್ರಮದಡಿ 2021–22ನೇ ಸಾಲಿಗೆ ಪ್ರತಿ ವಿದ್ಯಾರ್ಥಿನಿಗೆ 10 ನ್ಯಾಪ್‌ಕಿನ್ ಪ್ಯಾಡ್ ನೀಡಲಾಗುವುದು. ಇದಕ್ಕಾಗಿ 47 ಕೋಟಿ ರೂ. ವೆಚ್ಚದಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್‌ಗಳನ್ನು ಖರೀದಿಸಲಾಗುವುದು. ಆರೋಗ್ಯ ಇಲಾಖೆಯಿಂದ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯದ 2,859 ಆರೋಗ್ಯ ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ 478.91 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಆರೈಕೆ ನಿಯಮಗಳಿಗೆ 2021ಕ್ಕೆ ಅನುಮೋದನೆ ನೀಡಲಾಗಿದೆ. ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ 2017ರ ಅನ್ವಯ ಮಾನಸಿಕ ಅಸ್ವಸ್ಥತೆ ಹೊಂದಿರುವ ವ್ಯಕ್ತಿಗಳಿಗೆ ಮಾನಸಿಕ ಆರೋಗ್ಯ ಆರೈಕೆ ಮತ್ತು ಸೇವೆಗಳ ವಿತರಣೆ ಸಮಯದಲ್ಲಿ ಅಂತಹ ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುವುದು, ಉತ್ತೇಜಿಸುವುದು ಮತ್ತು ಪೂರೈಸುವ ಉದ್ದೇಶಕ್ಕಾಗಿ ಕರಡು ನಿಯಮಗಳನ್ನು ರೂಪಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಅದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದೀಗ ಅಂತಿಮ ಕರಡನ್ನು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.
ಎಲ್ಲ ಸಂಪುಟ ಉಪಸಮಿತಿಗಳನ್ನು ಪುನರ್ ರಚನೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಯವರಿಗೆ ನೀಡಲಾಗಿದೆ. ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬಳಿಕ ಉಪಸಮಿತಿಗಳು ರದ್ದಾಗಿದ್ದವು. 14 ಸಂಪುಟ ಉಪಸಮಿತಿಗಳನ್ನು ಪುನರ್ ರಚಿಸಲಾಗುವುದು ಎಂದು ಮಾಹಿತಿ ನೀಡಿದರು.
PublicNext
19/08/2021 03:55 pm