ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಣೇಶ ಚತುರ್ಥಿ ಸಾರ್ವಜನಿಕ ಆಚರಣೆಗೆ ಅವಕಾಶ ನೀಡುವುದು ಹಾಗೂ ಪ್ರಾಥಮಿಕ ಶಾಲೆಗಳ ಆರಂಭ ಮಾಡುವ ಕುರಿತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯುತ್ತಿದೆ. ಈ ಮೂಲಕ ಇಂದೇ ಶಾಲಾರಂಭ, ಕರ್ಫ್ಯೂ, ಗಣೇಶ ಚತುರ್ಥಿ ಆಚರಣೆ ಬಗ್ಗೆ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.
ಸಭೆಯಲ್ಲಿ ಸಚಿವರಾದ ಆರ್. ಅಶೋಕ, ಡಾ. ಕೆ. ಸುಧಾಕರ್, ಎಸ್ ಟಿ ಸೋಮಶೇಖರ, ಬಿ ಸಿ ನಾಗೇಶ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್, ತಜ್ಞ ವೈದರಾದ ಡಾ. ಸುದರ್ಶನ್ , ಡಾ. ಸಿ ಎನ್ ಮಂಜುನಾಥ, ಡಾ. ದೇವಿಶೆಟ್ಟಿ ಸೇರಿ ಇತರೆ ಅಧಿಕಾರಿಗಳು ಉಪಸ್ಥಿತರಿದ್ದಾರೆ.
ರಾಜ್ಯದಲ್ಲಿ ಈಗಾಗಲೇ 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಾಲಾ-ಕಾಲೇಜುಗಳಲ್ಲಿ ಈವರೆಗೂ ಕೋವಿಡ್ ಪ್ರಕರಣ ವರದಿಯಾಗಿಲ್ಲ. ಹಾಗಾಗಿ ಪ್ರಾಥಮಿಕ ಶಾಲೆಗಳನ್ನೂ ಆರಂಭಿಸಬೇಕು ಎನ್ನುವ ಚಿಂತನೆಯನ್ನು ಶಿಕ್ಷಣ ಇಲಾಖೆ ಮಾಡಿದೆ. ಈ ಸಂಬಂಧ ಇಂದಿನ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತಿದೆ.
ಗಡಿ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಕೋವಿಡ್ ಹೆಚ್ಚಾಗುತ್ತಿರುವುದು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಇಂತಹ ಸಂದರ್ಭದಲ್ಲಿ ಗೌರಿ-ಗಣೇಶ ಹಬ್ಬದ ಸಾರ್ವಜನಿಕ ಆಚರಣೆಗೆ ಅವಕಾಶ ನೀಡಿದರೆ ಆಗುವ ಪರಿಣಾಮದ ಕುರಿತು ಚರ್ಚೆ ನಡೆಸಲಾಗುತ್ತಿದೆ.
PublicNext
30/08/2021 05:38 pm