ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಇದೊಂದು ರಾಜಕೀಯ ಷಡ್ಯಂತ್ರ. ಜಾರಿ ನಿರ್ದೇಶನಾಲಯ ನನ್ನ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ ಎಂಬ ಮಾಹಿತಿ ಮಾಧ್ಯಮಗಳ ಮೂಲಕ ತಿಳಿದಿದೆ. ಇದು ನನಗೆ ಹಾಗೂ ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ನನಗೆ ನ್ಯಾಯಾಲಯದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರದಲ್ಲಿ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನನ್ನನ್ನು ಬಂಧಿಸಿದ 60 ದಿನಗಳ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಬೇಕಿತ್ತು. ಅವರು ಸರಿಯಾದ ಸಮಯಕ್ಕೆ ಆರೋಪಪಟ್ಟಿ ಸಲ್ಲಿಸದ ಕಾರಣ ನನಗೆ ಜಾಮೀನು ದೊರೆತಿತ್ತು. ಆದರೆ ಮೂರು ವರ್ಷಗಳ ನಂತರ ಸಲ್ಲಿಸುತ್ತಿದ್ದಾರೆ. ನನಗೆ ಇನ್ನು ಅದರ ಪ್ರತಿ ಸಿಕ್ಕಿಲ್ಲ. ಅವರು ಹೊಸದಾಗಿ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲ. ತೆರಿಗೆ ಇಲಾಖೆಯವರು ಕಾನೂನು ವಿರುದ್ಧವಾಗಿ ಸಾಕಷ್ಟು ಸೃಷ್ಟಿಸಿದ್ದಾರೆ. ಈಗ ಈ ವಿಚಾರ ನನ್ನ ಹಾಗೂ ನ್ಯಾಯಾಲಯದ ಮಧ್ಯೆ ಇದೆ. ನಾನು ಈ ನೆಲದ ಕಾನೂನನ್ನು ಗೌರವಿಸುತ್ತಿದ್ದು, ನ್ಯಾಯಾಂಗ ವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸ ಹೊಂದಿದ್ದೇನೆ. ಇದೊಂದು ರಾಜಕೀಯ ಷಡ್ಯಂತ್ರದ ಪ್ರಕರಣ. ಅಹ್ಮದ್ ಪಟೇಲ್ ಅವರ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಅವರಿಗೆ ಸಹಾಯ ಮಾಡಿದೆ ಎಂಬ ಕಾರಣಕ್ಕೆ ನನ್ನ ಹಾಗೂ ನನ್ನ ಸ್ನೇಹಿತರ ಮೇಲೆ ದಾಳಿ ಮಾಡಿ, ಅವರ ಹಣವನ್ನೂ ನನ್ನ ಹಣ ಎಂದು ಬರೆದಿದ್ದಾರೆ ಎಂದರು.
ನಾನು ಹುಟ್ಟಿನಿಂದ ರೈತ, ವೃತ್ತಿಯಲ್ಲಿ ಉದ್ಯಮಿ, ಆಯ್ಕೆಯಲ್ಲಿ ಶಿಕ್ಷಣಸ್ಥ, ಆಸಕ್ತಿಯಲ್ಲಿ ರಾಜಕಾರಣಿ ಎಂದು ಈಗಾಗಲೇ ಹೇಳಿದ್ದೇನೆ. ಆದರೆ ಬಿಜೆಪಿಯವರು ಅವರ ಪಕ್ಷದವರನ್ನೇ ಬಿಡುತ್ತಿಲ್ಲ, ಇನ್ನು ನನ್ನನ್ನು ಬಿಡುತ್ತಾರೆಯೇ? ಅವರ ರಾಜಕೀಯ ಹಾದಿಗೆ ಅಡ್ಡಿಯಾಗಿರುವವರನ್ನು ನಿರ್ಮೂಲನೆ ಮಾಡಲು ಹೊರಟಿದ್ದಾರೆ. ಅವರಿಗೆ ಶರಣಾಗಬೇಕು, ಇಲ್ಲದಿದ್ದರೆ ಅಂತಹವರನ್ನು ಮುಗಿಸಲು ಪ್ರಯತ್ನಿಸುತ್ತಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ರು.
PublicNext
26/05/2022 07:05 pm