ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. 75ನೇ ಸ್ವಾತಂತ್ರ್ಯೋತ್ಸವವನ್ನ ದೇಶಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಅದರಂತೆ ನಾಡಿನ ಮುಖ್ಯಮಂತ್ರಿ ಬೊಮ್ಮಾಯಿ ಅವರು ಧ್ವಜ ಹಾರಿಸಿದರು. ಈ ವೇಳೆ ಅವರು ಹಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಹೊಸ ಯೋಜನೆಗಳು:
* ಸ್ವಚ್ಛತೆ, ಪೌಷ್ಟಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕಾಗಿ ಹಾಗೂ ಕೆಚ್ಚೆದೆಯ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ಕೆಲವು ಕೊಡುಗೆಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ.
* ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೇ. 100ರಷ್ಟು ಶೌಚಾಲಯಗಳ ನಿರ್ಮಾಣವನ್ನು 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಆ ಮೂಲಕ ಶಾಲೆ, ಕಾಲೇಜುಗಳಲ್ಲಿ ಸ್ವಚ್ಛ-ಆರೋಗ್ಯಕರ ವಾತಾವರಣ ನಿರ್ಮಿಸಲಾಗುವುದು.
* ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂ.ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗುವುದು.
* ರೈತರ ಮಕ್ಕಳಿಗೆ ಜಾರಿಗೊಳಿಸಿರುವ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯವನ್ನು ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲಾಗುವುದು.
* ಭೂ ರಹಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಆದ್ಯತೆಯಾಗಿರಿಸಿಕೊಂಡು, ಅಗತ್ಯವನ್ನಾಧರಿಸಿ ರಾಜ್ಯದಲ್ಲಿ ಹೊಸದಾಗಿ 4,050 ಅಂಗನವಾಡಿ ತೆರೆಯಲಾಗುವುದು. ಈ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಠಿಕ ಆಹಾರ ಕಲ್ಪಿಸಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಟಿಕ ಆಹಾರ ಹಾಗೂ ಶಾಲಾ ಪೂರ್ವ ಶಿಕ್ಷಣ ನೀಡಲು ಅವಕಾಶ ಕಲ್ಪಿಸಲಾಗುವುದು. 8100 ಮಹಿಳೆಯರಿಗೂ ಇದರಿಂದ ಉದ್ಯೋಗಾವಕಾಶ ದೊರೆಯಲಿದೆ.
* ಸೈನಿಕರು ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕಾರ್ಯನಿರ್ವಹಿಸುತ್ತಾರೆ. ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟರೆ, ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು.
PublicNext
15/08/2022 10:59 am