ದಾವಣಗೆರೆ: ರಾಜ್ಯಾದ್ಯಂತ ಬಿದ್ದ ಅಕಾಲಿಕ ಮಳೆಯಿಂದ ದಾವಣಗೆರೆ ಜಿಲ್ಲೆಯಲ್ಲಿ 2651 ಹೆಕ್ಟೇರ್ ಬೆಳೆ ನಾಶವಾಗಿದೆ. ಹಾನಿಗೊಳಗಾದ ಎಲ್ಲಾ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.
ಹರಿಹರ ತಾಲ್ಲೂಕಿನ ನಂದಿತಾವರೆ ಬಳಿಯ ಭಾಸ್ಕರರಾವ್ ಕ್ಯಾಂಪಿನಲ್ಲಿ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದ ನಂತರ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 40 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಅಕಾಲಿಕ ಮಳೆಯಿಂದ ಪ್ರವಾಹ ಬಂದು ಎಲೆಬಳ್ಳಿ, ಅಡಿಕೆ, ಭತ್ತ ಬೆಳೆ ಹಾನಿಯಾಗಿದೆಯೋ, ಅಲ್ಲೆಲ್ಲಾ ಸಂಪೂರ್ಣ ಸರ್ವೆ ನಡೆಸಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಸಲ್ಲಿಸಿದ ಬಳಿಕ ತಕ್ಷಣ ಸರ್ಕಾರದಿಂದ ರೈತರಿಗೆ ಪರಿಹಾರ ನೀಡುವ ಪ್ರಯತ್ನ ಮಾಡಲಾಗುವುದು. ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೊಳ್ಳದೇ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ನಷ್ಟ ಅಂದಾಜು ಮಾಡುವುದು ಹಾಗೂ ಅವರಿಗೆ ಸೂಕ್ತ ಬೆಳೆಹಾನಿ ಪರಿಹಾರ ನೀಡುವುದರತ್ತ ಗಮನ ಹರಿಸಬೇಕೆಂದರು.
ದಾವಣಗೆರೆ ಜಿಲ್ಲೆಯ ಮಲೆಬೇನ್ನೂರು, ಬಿಳಿಚೋಡು, ಚನ್ನಗಿರಿ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಹಾನಿಯಾಗಿದೆ. ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಪರಿಹಾರ ಕೊಡಲಾಗುವುದು. ಕಳೆದ ಬಾರಿ ಕೇಂದ್ರ ಸರ್ಕಾರದ ಎನ್‍ಡಿಆರ್ ಎಫ್ ಮಾರ್ಗಸೂಚಿಗಿಂತ ಹೆಚ್ಚಿಗೆ ಪರಿಹಾರ ಹಣ ನೀಡಲಾಗಿದೆ. ಪ್ರಸ್ತುತ ವರ್ಷವೂ ಅಷ್ಟೇ ಪ್ರಮಾಣದಲ್ಲಿ ಪರಿಹಾರ ನೀಡಲಾಗುವುದು. 2021-22 ನೇ ಸಾಲಿನ ವಿಮಾ ಹಣ ಇನ್ನೊಂದು ವಾರದಲ್ಲಿ ರೈತರ ಕೈ ಸೇರಲಿದೆ ಎಂದು ತಿಳಿಸಿದರು.
PublicNext
21/05/2022 12:22 pm