ಬೆಂಗಳೂರು: ಭ್ರಷ್ಟಾಚಾರ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಲ್ಲಿಸಿರುವ ಅರ್ಜಿ ಆಧರಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಬಿ.ವೈ. ವಿಜಯೇಂದ್ರ, ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಇತರರಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.
ಭ್ರಷ್ಟಾಚಾರ ಕುರಿತಂತೆ ತನಿಖೆ ಕೋರಿ ಸಲ್ಲಿಸಿದ್ದ ಖಾಸಗಿ ದೂರನ್ನು ವಜಾಗೊಳಿಸಿರುವ ಜನಪ್ರತಿನಿಧಿಗಳ ವಿಚಾರಣಾ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೂರುದಾರ ಟಿ.ಜೆ ಅಬ್ರಹಾಂ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ಪೀಠವು ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ ಮರಡಿ, ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ, ಪುತ್ರಿ ಪದ್ಮಾವತಿ, ಅಳಿಯ ಸಂಜಯ್ ಶ್ರೀ, ಎಸ್.ಟಿ. ಸೋಮಶೇಖರ್, ಉದ್ಯಮಿ ಚಂದ್ರಕಾಂತ ರಾಮಲಿಂಗಂ ಅವರಿಗೂ ನೋಟಿಸ್ ನೀಡಲು ಆದೇಶಿಸಿ, ವಿಚಾರಣೆಯನ್ನು ಆಗಸ್ಟ್ ಎರಡನೇ ವಾರಕ್ಕೆ ಮುಂದೂಡಿತು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಅನುಷ್ಠಾನ ಮಾಡುವಾಗ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರು ಲಂಚ ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅಬ್ರಹಾಂ ಖಾಸಗಿ ದೂರು ಸಲ್ಲಿಸಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಬೇಕು ಎಂದು ಅವರು ಕೋರಿದ್ದರು.
PublicNext
03/08/2021 09:21 pm