ಬೆಂಗಳೂರು: ‘ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ’ ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ, ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು.
ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು.
ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು.
ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ!
PublicNext
29/09/2020 03:54 pm