ಬೆಂಗಳೂರು: ರಾಜ್ಯದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಯೇ ಅಪರಾಧ. ಅದಕ್ಕೆ ಏನು ಶಿಕ್ಷೆ? ಅರ್ಜಿ ಹಾಕಿಕೊಂಡು ಅಕ್ರಮವನ್ನು ಸಕ್ರಮ ಮಾಡಿಕೊಳ್ಳಿ ಎಂದು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಹೇಳಬಹುದೇ ಎಂದು ಪ್ರಶ್ನಿಸಿದರು.
ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿರುವ ದುರಂತದ ಹೊಣೆಯನ್ನು ಸಿಎಂ ಯಡಿಯೂರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೊರಬೇಕು. ಆಂಧ್ರದಿಂದ ಪರವಾನಿಗೆ ಇಲ್ಲದೆ ಜಿಲಿಟಿನ್ ಮತ್ತು ಡೈನಮೇಟ್ ತರಲಾಗಿತ್ತು. ಇದು ಮೊದಲ ಅಪರಾಧ. ತಂದಿದ್ದನ್ನು ಸುರಕ್ಷಿತವಾದ ಜಾಗದಲ್ಲಿ ಇಡದೇ ಬೇಜವಾಬ್ದಾರಿ ಮೆರೆದಿದ್ದು ಎರಡನೇ ಅಪರಾಧ. ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯ ಈ ದುರಂತದಲ್ಲಿ ಎದ್ದು ಕಾಣುತ್ತಿದೆ ಎಂದು ಹೇಳಿದರು.
PublicNext
23/01/2021 06:02 pm