ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಿನ ವಿರುದ್ದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ, ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪರೇಡ್ ನಡೆಸಲು ದೆಹಲಿ ಪೊಲೀಸರು ಕೊನೆಗೂ ಅನುಮತಿ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೈತ ಮುಖಂಡ ದರ್ಶನ್ ಪಾಲ್, ರೈತರಿಗೆ ದೆಹಲಿಗೆ ಪ್ರವೇಶಿಸಲು ಮತ್ತು ಪ್ರತಿ ಮಾರ್ಗದಲ್ಲಿ 100 ಕಿ.ಮೀ ದೂರ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಹರಿಯಾಣ, ಪಂಜಾಬ್ ಮತ್ತು ಪಶ್ಚಿಮ ಉತ್ತರ ಪ್ರದೇಶ ಸೇರಿದಂತೆ ನೆರೆಯ ರಾಜ್ಯಗಳ ಲಕ್ಷಾಂತರ ರೈತರು ಜನವರಿ 26ರಂದು ನಡೆಯುವ ಟ್ರ್ಯಾಕ್ಟರ್ ಪರೇಡ್ ನಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ದೆಹಲಿಯ ವಿಜ್ಞಾನ ಭವನದಲ್ಲಿ ನಿನ್ನೆ ನಡೆದ 11ನೇ ಸುತ್ತಿನ ಮಾತುಕತೆಯಲ್ಲೂ ತಮ್ಮ ಪಟ್ಟು ಬಿಡದ ರೈತರು, ಕಾರ್ಪೋರೇಟ್ ಕಂಪನಿಗಳ ಪರವಾಗಿರುವ ಮೂರು ಕೃಷಿ ಕಾನೂನುಗಳನ್ನು ಸಂಪೂರ್ಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಜೊತೆಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಗ್ಯಾರಂಟಿ ನೀಡಬೇಕು. ಇಲ್ಲದಿದ್ದರೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರು.
PublicNext
23/01/2021 08:49 pm