ದಾವಣಗೆರೆ: ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಚಿತ್ರದುರ್ಗದ ಯಾದವ ಮಠದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಅವರು ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಒಂದು ವೇಳೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳದಿದ್ದರೆ ಯಾದವ ಸಮಾಜ ಬಿಜೆಪಿ ಕೈಬಿಡಲಿದೆ ಎಂಬ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಯಾದವ ಸಮಾಜದ ಏಕೈಕ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇತ್ತು. ಆದ್ರೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿದ ಕಾರಣ ಯಾದವ ಸಮಾಜ ಕಣ್ಣೀರಲ್ಲಿ ಮುಳುಗಿದೆ. ಇದಕ್ಕೆ ಬಿಜೆಪಿ ರಾಜ್ಯ ನಾಯಕರು, ಹೈಕಮಾಂಡ್ ನಿರ್ಧಾರವೇ ಕಾರಣ ಎಂದು ಗುಡುಗಿದರು.
ಬೊಮ್ಮಾಯಿ ಸಂಪುಟದಲ್ಲಿ ಯಾದವರಿಗೆ ಸಚಿವ ಸ್ಥಾನ ನೀಡಿಲ್ಲ. ಯಾದವ ಸಮುದಾಯದ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಸರ್ಕಾರ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತದೆ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ 40 ಲಕ್ಷ ಯಾದವ ಸಮುದಾಯವಿದೆ. 27 ತಾಲೂಕುಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವುದೇ ಈ ಸಮುದಾಯ. ಚುನಾವಣೆ ಪೂರ್ವದಲ್ಲಿ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಸಚಿವ ಸ್ಥಾನದ ಭರವಸೆ ನೀಡಿದ್ರು. ಅವರ ಅವಧಿಯಲ್ಲಿ ಈ ಭರವಸೆ ಈಡೇರಲಿಲ್ಲ. ಪ್ರಸ್ತುತ ಸಂಪುಟದಲ್ಲಿ ಕೊನೆಯವರೆಗೂ ಪೂರ್ಣಿಮಾ ಅವರ ಹೆಸರಿತ್ತು. ಘೋಷಣೆ ಸಮಯದಲ್ಲಿ ಅವರ ಹೆಸರು ಬಿಟ್ಟಿದ್ದಾರೆ. ಇದು ಯಾದವ ಸಮುದಾಯಕ್ಕೆ ಮಾಡಿದ ಅಪಮಾನ ಎಂದು ಕಿಡಿಕಾರಿದರು.
PublicNext
09/08/2021 02:35 pm