ಬೆಂಗಳೂರು: ರಾಜ್ಯದ ಸಾವಿರಾರು ಜನರು ಕೋವಿಡ್‌ಗೆ ಬಲಿಯಾಗುತ್ತಿದ್ದಾಗ ನೆರವಿಗೆ ಬಾರದೆ ಅವಿತು ಕುಳಿತು ಈಗ ದಿಢೀರ್ ಪ್ರತ್ಯಕ್ಷರಾಗಿರುವ ಬಿಜೆಪಿ ನಾಯಕರು ಜನ ಆಶೀರ್ವಾದ ಯಾತ್ರೆ ಮಾಡುತ್ತಿದ್ದು, ಇದನ್ನು ಹೆಣಾಶೀರ್ವಾದ ಯಾತ್ರೆವೆಂದು ಕರೆಯುವುದು ಸೂಕ್ತ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ಮೊದಲ ಹಾಗೂ ಎರಡನೇ ಅಲೆಯಲ್ಲಿ ಸೋಂಕಿತರಿಗೆ ಬೆಡ್, ಆಕ್ಸಿಜನ್ ಕಲ್ಪಿಸುವುದನ್ನು ಸರ್ಕಾರ ನಿರ್ಲಕ್ಷಿಸಿತ್ತು. ಪರಿಣಾಮವಾಗಿ ಮೂರು ಲಕ್ಷಕ್ಕೂ ಅಧಿಕ ಜನರು ರಾಜ್ಯದಲ್ಲಿ ಮೃತಪಟ್ಟರು ಎಂದು ವಿರೋಧಪಕ್ಷಗಳು ಆರೋಪಿಸಿವೆ. ರಾಜ್ಯ ಆರೋಗ್ಯ ಇಲಾಖೆಯ ಕೋವಿಡ್ ಬುಲೆಟಿನ್ ಪ್ರಕಾರ ಆಗಸ್ಟ್ 2ರ ತನಕ 36 ಸಾವಿರ ಜನರು ಮೃತಪಟ್ಟಿದ್ದರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಸಲ್ಲಿಸಿರುವ ಡೆತ್ ಆಡಿಟ್‌ನಲ್ಲಿ ಆಗಸ್ಟ್ 2ರ ತನಕ ಕೇವಲ 14,371 ಜನರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ರೀತಿ ಒಂದೊಂದು ಕಡೆ ಒಂದೊಂದು ಅಂಕಿಅಂಶ ಹೇಳುತ್ತಿರುವುದನ್ನು ಗಮನಿಸಿದರೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿರುವುದು ಸ್ಪಷ್ಟವಾಗುತ್ತದೆ ಎಂದು ದೂರಿದರು.
ಅಗತ್ಯ ವಸ್ತುಗಳ ಬೆಲೆ ದಿನದಿನಕ್ಕೆ ಏರುತ್ತಲೇ ಇದೆ. 80 ರೂಪಾಯಿಗೆ ಸಿಗುತ್ತಿದ್ದ ಅಡುಗೆ ಎಣ್ಣೆಯ ಬೆಲೆ 150 ರೂಪಾಯಿಗೂ ಅಧಿಕವಾಗಿದೆ. ಕಳೆದ ಕೆಲವು ವರ್ಷಗಳಿಂದ ಕಚ್ಚಾ ತೈಲದ ಬೆಲೆ ಕಡಿಮೆಯಾಗುತ್ತಿದ್ದರೂ ತೆರಿಗೆಯನ್ನು ಏರಿಸಿದ್ದರಿಂದ ಭಾರತೀಯರು ಪೆಟ್ರೋಲ್, ಡೀಸೆಲ್‌ಗೆ ದುಬಾರಿ ಬೆಲೆ ತೆರಬೇಕಾಗಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 9 ರೂ. ಇದ್ದ ಕೇಂದ್ರ ಸರ್ಕಾರದ ತೆರಿಗೆಯನ್ನು ಮೋದಿ ಸರ್ಕಾರ ಹಂತಹಂತವಾಗಿ 32 ರೂ.ಗೆ ಏರಿಕೆ ಮಾಡಿದೆ. ಕೇಂದ್ರ ಸರ್ಕಾರವು ಅಡುಗೆ ಅನಿಲ (ಎಲ್‌ಪಿಜಿ) ಸಿಲೆಂಡರ್ ಸಬ್ಸಿಡಿಯನ್ನು ರದ್ದುಪಡಿಸಿದ್ದರಿಂದ 450 ರೂಪಾಯಿಗೆ ಜನರಿಗೆ ಸಿಗುತ್ತಿದ್ದ ಸಿಲೆಂಡರ್‌ಗೆ ಈಗ 900 ರೂಪಾಯಿ ಕೊಡಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
PublicNext
19/08/2021 06:23 pm