ಚಿತ್ರದುರ್ಗ : ಜಿಲ್ಲೆಯಲ್ಲಿ ಪ್ರೌಢಶಾಲೆಗಳ 9 ರಿಂದ 10ನೇ ತರಗತಿ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಸೋಮವಾರ ಆರಂಭವಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲಾ-ಕಾಲೇಜುಗಳ ಭೌತಿಕ ತರಗತಿ ಆರಂಭದ ಹಿನ್ನಲೆಯಲ್ಲಿ ನಗರದ ವಿದ್ಯಾವಿಕಾಸ ಪ್ರೌಢಶಾಲೆ ಹಾಗೂ ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಭಾರತೀಯ ಪ್ರೌಢಶಾಲೆಗಳಿಗೆ ಶಾಲೆಗೆ ಭೇಟಿ ನೀಡಿ, ಶಾಲಾರಂಭದ ಸಕಲ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ತರಗತಿಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳ, ಶಾಲಾ ಸಿಬ್ಬಂದಿಯ ದೇಹದ ಉಷ್ಣತೆ ತಪಾಸಣೆ ಮಾಡುವುದು ಸೇರಿದಂತೆ ಕೋವಿಡ್-19 ಸೋಂಕು ಹರಡದಂತೆ ತಡೆಯಲು ಕಠಿಣ ಕ್ರಮಕೈಗೊಳ್ಳಬೇಕು ಎಂದು ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿಗಳು ಪರಸ್ಪರ ಅಂತರ ಕಾಯ್ದುಕೊಂಡು ಪಾಠ ಕೇಳುವ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ಕೊಠಡಿಗಳ ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದರು. ಶಾಲಾ-ಕಾಲೇಜುಗಳ ಆವರಣದ ಸುತ್ತ ಹಾಗೂ ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು. ಸರ್ಕಾರದ ಕೋವಿಡ್-19ರ ಮಾರ್ಗಸೂಚಿಯಂತೆ ಶಾಲೆಯ ಎಲ್ಲ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಸ್ಯಾನಿಟೈಸರ್ ಬಳಕೆ ಮಾಡುವಂತೆ ಶಾಲಾ ಮುಖ್ಯಶಿಕ್ಷಕರಿಗೆ ಸೂಚನೆ ನೀಡಿದರು.ಶಾಲೆ ಆರಂಭವಾಗಿರುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಮಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳ ಅಭಿಪ್ರಾಯ ಕೇಳಿ, ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು ಹಾಗೂ ಎಸ್‍ಎಸ್‍ಎಲ್‍ಸಿಯಲ್ಲಿ ಚಿತ್ರದುರ್ಗ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಅಲಂಕರಿಸಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿ ತರುವಂತಹ ಫಲಿತಾಂಶ ಪಡೆಯಬೇಕು ಎಂದು ಸಲಹೆ ನೀಡಿದರು. ಜಿಲ್ಲಾಧಿಕಾರಿ ಭೇಟಿ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಉಪಸ್ಥಿತರಿದ್ದರು.
PublicNext
23/08/2021 08:56 pm