ದಾವಣಗೆರೆ: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅರೆ ಹುಚ್ಚರಾಗಿದ್ದಾರೆ. ಬಾಯಿಗೆ ಬಂದಂತೆ ಏನೇನೋ ಮಾತನಾಡುತ್ತಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆರ್ ಎಸ್ ಎಸ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಕುಮಾರಸ್ವಾಮಿ ಸರ್ವನಾಶ ಆಗ್ತಾರೆ ಎಂದು ವಾಗ್ದಾಳಿ ನಡೆಸಿದರು.
ಹಿಂದುತ್ವ, ಸಂಸ್ಕೃತಿ, ಸಂಸ್ಕಾರ ಕೊಟ್ಟಿದ್ದು ಸಂಘ ಪರಿವಾರ. ಸಂಘ ಪರಿವಾರದ ಮಾರ್ಗದರ್ಶನದಲ್ಲೇ ಆಡಳಿತ ನಡೆಸುತ್ತೇವೆ. ಒಳ್ಳೆಯ ಆಡಳಿತ ಕೊಡುತ್ತೇವೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಚೆನ್ನಾಗಿ ನಡೆದಿದೆ. ಜನರಿಗೆ ಸಾಕಷ್ಟು ಅನುಕೂಲ ಆಗಿದೆ. ಸ್ಥಳದಲ್ಲೇ ಕೆಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಸಚಿವರ ಗ್ರಾಮ ವಾಸ್ತವ್ಯಕ್ಕೆ ಜನರು ಖುಷಿಪಟ್ಟಿದ್ದಾರೆ. ಆಡಳಿತವೇ ಜನರ ಬಳಿಗೆ ಬಂದಿದೆ. ಇದೊಂದು ಒಳ್ಳೆಯ ಕಾರ್ಯ ಎಂದು ಜನರೇ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೋವಿಡ್ ಕಾರಣಕ್ಕೆ ನಿಂತಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಶುರುವಾಗಿದೆ. ಜನರು ಸಹ ತಮ್ಮ ಸಮಸ್ಯೆ ಹೇಳಿಕೊಳ್ಳಲು ಹಾಗೂ ಪರಿಹರಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
PublicNext
17/10/2021 03:05 pm