ದಾವಣಗೆರೆ: ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಅವರ ಹತ್ಯೆಗೆ ಸ್ಕೆಚ್ ರೂಪಿಸಿದ್ದ ಬಗ್ಗೆ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ. ಯಾರೇ ತಪ್ಪು ಮಾಡಿದ್ದರೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ ವಿಶ್ವನಾಥ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಘಟನೆ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಗಮನಕ್ಕೆ ತಂದಿದ್ದಾರೆ. ತನಿಖೆಗೆ ಆದೇಶಿಸಲಾಗಿದೆ. ಯಾರು ಈ ರೀತಿಯ ಹೇಯ ಕೃತ್ಯ ಮಾಡಲು ಹೊರಟಿದ್ದರೂ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ರೀತಿಯಾದ ಕೃತ್ಯಗಳು ನಿಜಕ್ಕೂ ಖಂಡನೀಯ. ಜನಪ್ರತಿನಿಧಿ ಮೇಲೆ ಹತ್ಯೆಗೆ ಸಂಚು ರೂಪಿಸುವಂಥದ್ದು ನಿಜವಾಗಿಯೂ ಸಾಮಾಜಿಕ ಒಳಿತಲ್ಲ ಎಂದು ಅಭಿಪ್ರಾಯಪಟ್ಟರು.
ಮುಂಬರುವ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸಬಾರದು. ಈ ರೀತಿಯ ಕೃತ್ಯಕ್ಕೆ ಪ್ರೇರಣೆ ಕೊಡುವವರು ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರಲ್ಲಿ ನಾನು ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಪಕ್ಷೇತರರಾಗಿ ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಬಿಜೆಪಿಗೆ ಹಿನ್ನೆಡೆ ಆಗಲ್ಲ. ಅಲ್ಲಿ ಬಿಜೆಪಿ ಶಾಸಕರಿದ್ದಾರೆ. ಪ್ರಜ್ಞಾವಂತ ಮತದಾರರಿದ್ದಾರೆ. ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಪಕ್ಷಕ್ಕೇನೂ ಹಾನಿಯಾಗುವುದಿಲ್ಲ.ನಮಗೆ ಮೊದಲ ಪ್ರಾಶಸ್ತ್ಯ ಮತವನ್ನು ನೀಡುವಂತೆ ಮಾಡಲು ಶ್ರಮಿಸುವುದಾಗಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಎರಡನೇ ಪ್ರಾಶಸ್ತ್ಯ ಮತವನ್ನು ಏನು ಮಾಡುತ್ತಾರೋ ಗೊತ್ತಿಲ್ಲ. ಬಿಜೆಪಿ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.
PublicNext
02/12/2021 04:10 pm