ಬೆಂಗಳೂರು: ರಾಜ್ಯದ ಜನರ ಹಿತಕ್ಕಾಗಿ, ಕುಡಿಯುವ ನೀರಿಗಾಗಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಇದನ್ನು ತಡೆಯಲು ಗೃಹ ಸಚಿವರು ಮತ್ತೊಂದು ಜನ್ಮ ಎತ್ತಿ ಬರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಪಾದಯಾತ್ರೆ, ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್, ಪೊಲೀಸರು ನನ್ನನ್ನಾದರೂ ಬಂಧಿಸಲಿ, ಸಿದ್ದರಾಮಯ್ಯರನ್ನು ಬಂಧಿಸಲಿ. ಯಾರನ್ನಾದರೂ ಬಂಧಿಸಲಿ. ನಾವು ಪಾದಯಾತ್ರೆಯಿಂದ ಹಿಂದೆ ಸರಿಯುವ ಮಾತಿಲ್ಲ. ಕೊರೊನಾ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿಕೊಂಡು ಪಾದಯಾತ್ರೆ ಮಾಡಿಯೇ ಮಾಡುತ್ತೇವೆ ಎಂದಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರಕ್ಕೆ ಅಧಿಕಾರಿಗಳ ಸಮೇತ ಸಾವಿರಾರು ಜನ ಸೇರಿದ್ದಾರೆ. ಅಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗಿದೆ. ಮತ್ತೆ ಅವರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
PublicNext
06/01/2022 05:53 pm