ದಾವಣಗೆರೆ: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಕಾಂಗ್ರೆಸ್ ನಾಯಕರಿಗೆ ಜ್ಞಾನವೇ ಇಲ್ಲ ಎಂದು ಆರೋಪಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ತುಂಗಾಭದ್ರಾ ಸಭಾಂಗಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಪ್ರಕರಣಗಳು ದಿನೇ ದಿನೇ ಜಾಸ್ತಿಯಾಗುತ್ತಿವೆ. ಇಂಥ ವೇಳೆಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಕಾಂಗ್ರೆಸ್ ನಾಯಕರು ಕೊರೊನಾ ಹೆಚ್ಚಳಕ್ಕೆ ಕಾರಣರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಜ್ಞಾನವೇ ಇಲ್ಲ ಎಂದು ಟೀಕಿಸಿದರು.
ಮೇಕೆದಾಟು ಯೋಜನೆ ಸೂಕ್ಷ್ಮ ವಿಷಯ. ಇದನ್ನು ಸೂಕ್ಷ್ಮವಾಗಿಯೇ ಬಗೆಹರಿಸಿಕೊಳ್ಳಬೇಕು. ಯಾವ ರೀತಿ ನಿಭಾಯಿಸಬೇಕು ಎಂಬುದನ್ನು ಮೊದಲು ಅರಿತುಕೊಳ್ಳಬೇಕು. ಅದನ್ನು ಬಿಟ್ಟು ಪಾದಯಾತ್ರೆ ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಮುಂದೆ ಯೋಜನೆ ಅರ್ಧಕ್ಕೆ ನಿಂತರೆ ಅದಕ್ಕೆ ಕಾಂಗ್ರೆಸ್ ನೇರ ಹೊಣೆ. ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಜವಾಬ್ದಾರಿಯಿಂದ ನಡೆದುಕೊಳ್ಳಲಿ ಎಂದು ಕಿವಿಮಾತು ಹೇಳಿದರು.
PublicNext
13/01/2022 05:31 pm