ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಯೋಗಿ ಆದಿತ್ಯನಾಥ್ ಸರ್ಕಾರದ ಸಚಿವರು, ಶಾಸಕರು ಬಿಜೆಪಿ ತೊರೆದು ಸಮಾಜವಾದಿ ಪಕ್ಷದ ಕದ ತಟ್ಟಿದ್ದಾರೆ. ಈಗ ಇದು ಹಳೆಯ ಸುದ್ದಿ. ಸದ್ಯದ ಬೆಳವಣಿಗೆಯಲ್ಲಿ ಸಮಾಜವಾದಿ ಪಕ್ಷದ ನಾಯಕ, ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಹೌದು. ಮುಲಾಯಂ ಸಿಂಗ್ ಅವರ ಕಿರಿಯ ಮಗ ಪ್ರತೀಕ್ ಯಾದವ್ ಪತ್ನಿ ಅಪರ್ಣಾ ಯಾದವ್ 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಲಕ್ನೋ ಕ್ಯಾಂಟ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ರೀಟಾ ಬಹುಗುಣ ಜೋಶಿ, ಅಪರ್ಣಾ ಅವರನ್ನು 33,796 ಮತಗಳ ಅಂತರದಿಂದ ಸೋಲಿಸಿದ್ದರು. ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ಅಪರ್ಣಾ ಯಾದವ್ ತೀರ್ಮಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಬಿಜೆಪಿ ಮತ್ತು ಅಪರ್ಣಾ ಯಾದವ್ ನಡುವೆ ಮಾತುಕತೆ ನಡೆಯುತ್ತಿದ್ದು, ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಅಪರ್ಣಾ ಯಾದವ್ ಬಿಜೆಪಿ ಸೇರುವ ಸಾಧ್ಯತೆ ಎಂದು ವರದಿಯಾಗಿದೆ.
PublicNext
16/01/2022 02:13 pm