ದಾವಣಗೆರೆ : ವಾಲ್ಮೀಕಿ ನಾಯಕ ಸಮಾಜಕ್ಕೆ ಶೇಕಡಾ 7.5ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷ ಬಿ. ವೀರಣ್ಣ ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಹರದ ವಾಲ್ಮೀಕಿ ಪೀಠದ ಜಗದ್ಗುರುಗಳಾದ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿ ನೀಡಿರುವ ಗಡುವಿನ ಒಳಗೆ ಬೇಡಿಕೆ ಈಡೇರದಿದ್ದರೆ ಪಾದಯಾತ್ರೆ ಮೂಲಕ ಬೆಂಗಳೂರು ತಲುಪಿ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ.
ಶ್ರೀಗಳು ಧರಣಿ ಸತ್ಯಾಗ್ರಹ ಆರಂಭಿಸಿ 77 ದಿನಗಳಾಗಿವೆ. ನೂರು ದಿನ ಪೂರೈಸುವ ಮುನ್ನ ಸರ್ಕಾರ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ.
ಸ್ವಾಮೀಜಿಯವರ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ನಾಡಿನೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೂಡಲೇ ಬೇಡಿಕೆ ಈಡೇರಿಸಬೇಕು. ಶ್ರೀಗಳ ಸಂದೇಶಕ್ಕಾಗಿ ನಾವು ಕಾಯುತ್ತಿದ್ದೇವೆ.ಆಮೇಲೆ ಸರ್ಕಾರ ನಮ್ಮ ಸಿಟ್ಟು ಎದುರಿಸಬೇಕಾಗುತ್ತದೆ ಎಂದು ಹೇಳಿದರು.
ಫೆಬ್ರವರಿ 10 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶ್ರೀಗಳು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್ ದಾಸ್ ಆಯೋಗ ತನ್ನ ವರದಿ ಸಲ್ಲಿಸಿ ಇಂದಿಗೆ 1 ವರ್ಷ 8 ತಿಂಗಳು ಕಳೆದಿವೆ. ಆದರೂ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವ ಕಾರಣ ಶ್ರೀಗಳು ಧರಣಿ ಸತ್ಯಾಗ್ರಹ ನಡೆಸುವುದು ಅನಿವಾರ್ಯವಾಗಿದೆ ಆಯೋಗದ ವರದಿ ಜಾರಿಗೊಳಿಸುವ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
PublicNext
27/04/2022 09:39 pm