ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಶುಕ್ರವಾರ ಭೇಟಿ ಮಾಡಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ನವದೆಹಲಿಯ ಅಧಿಕೃತ ನಿವಾಸದಲ್ಲಿ ಈ ಸಭೆ ನಡೆದಿದೆ.
ಈ ವರ್ಷದ ಆರಂಭದಲ್ಲಿ ನಡೆದ ಗೋವಾ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಹಣಾಹಣಿ ನಡೆಸಿದ್ದವು. ಇದರಿಂದಾಗಿ ಅರವಿಂದ್ ಕೇಜ್ರಿವಾಲ್ ಹಾಗೂ ಮಮತಾ ಬ್ಯಾನರ್ಜಿ ಅವರ ಮಧ್ಯೆದ ರಾಜಕೀಯ ಸಂಬಂಧ ಹದಗೆಟ್ಟಿತ್ತು. ಗೋವಾ ಚುನಾವಣೆಯಲ್ಲಿ ಟಿಎಂಸಿ ಯಾವುದೇ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು. ಆದರೆ ಎಎಪಿ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಜಸ್ಟೀಸ್ ಕಾನ್ಕ್ಲೇವ್ನಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೆಹಲಿಯಲ್ಲಿದ್ದಾರೆ. ಇತರ ರಾಜ್ಯಗಳ ಮುಖ್ಯಮಂತ್ರಿಗಳು ಹೈಕೋರ್ಟ್ ಸಿಜೆಗಳು ಹಾಗೂ ಸಿಎಂಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಮಧ್ಯೆ ಅರವಿಂದ್ ಕೇಜ್ರಿವಾಲ್ ಹಾಗೂ ಮಮತಾ ಬ್ಯಾನರ್ಜಿ ಅವರು ಸಭೆ ನಡೆಸಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ. ಆದರೆ ಸಭೆಯಲ್ಲಿ ನಡೆದ ಮಾತುಕತೆಯನ್ನು ಉಭಯ ನಾಯಕರು ಎಲ್ಲಿಯೂ ಬಹಿರಂಗಗೊಳಿಸಿಲ್ಲ. 2024ರ ಲೋಕಸಭೆ ಚುನಾವಣೆ ಮತ್ತು ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಗ್ಗಟ್ಟಿನ ಕುರಿತು ಇಬ್ಬರೂ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
PublicNext
30/04/2022 09:18 am