ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು, ಸಚಿವರ ವಿರುದ್ಧ ಸುಳ್ಳಿನ ಸರಮಾಲೆಯ ಆಪಾದನೆ ಮಾಡುತ್ತಿದ್ದಾರೆ. ಇವೆಲ್ಲಾ ಶುದ್ಧ ಸುಳ್ಳು. ದಾಖಲೆಗಳಿದ್ದರೆ ಬಿಡುಗಡೆ ಮಾಡಿ ಆಪಾದನೆ ಮಾಡಲಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸವನ್ನು ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವು ದಿನಕಳೆದಂತೆ ಪಾತಾಳಕ್ಕೆ ಹೋಗುವಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಸಚಿವರ ಮೇಲೆ ಸುಳ್ಳಿನ ಆರೋಪ ಹೊರಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಸಚಿವರಾಗಿದ್ದ ಕೆ. ಎಸ್. ಈಶ್ವರಪ್ಪರ ವಿರುದ್ಧ ಷಡ್ಯಂತ್ರ ರೂಪಿಸಿ ರಾಜೀನಾಮೆ ನೀಡುವಂತೆ ಮಾಡಲಾಯಿತು. ಏನೇ ಆರೋಪ ಮಾಡುವ ಮುನ್ನ ಸೂಕ್ತ ದಾಖಲೆ ಕೊಟ್ಟು ಮಾಡಬೇಕು. ಸುಳ್ಳಿನ ಸರಮಾಲೆ ಹೇಳುತ್ತಾ ಹೋದರೆ ಯಾರೂ ನಂಬುವುದಿಲ್ಲ ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರದ್ದೇ ಪರಮಾಧಿಕಾರ. ಈ ಬಗ್ಗೆ ಸಿಎಂ ನಿರ್ಧಾರ ಮಾಡಲಿದ್ದಾರೆ ಎಂದು ತಿಳಿಸಿದರು.
ಕೆಡಿಪಿ ಸಭೆಯನ್ನು ತುಂಬಾ ತಿಂಗಳ ನಂತರ ನಡೆಸಲಾಗುತ್ತಿದೆಯಲ್ವಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಹ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಹಲವು ಬಾರಿ ಬಂದು ಹೋಗಿದ್ದೇನೆ. ಕೊರೊನಾ ವೇಳೆಯಲ್ಲಿ ಸೋಂಕು ನಿಯಂತ್ರಣಕ್ಕೆ ಕ್ರಮ ತೆಗೆದುಕೊಂಡಿದ್ದೇವೆ. ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಭೈರತಿ ಬಸವರಾಜ್ ಹೇಳಿದರು.
PublicNext
06/05/2022 03:33 pm