ಹುಬ್ಬಳ್ಳಿ: ಮುಖ್ಯಮಂತ್ರಿ ಕುರ್ಚಿಗೆ 2500 ಕೋಟಿ ರೂ. ಕೇಳಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ರಾಜಕಾರಣದಲ್ಲಿ ತೀವ್ರ ಸಂಚಲನವನ್ನುಂಟು ಮಾಡಿದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಈಗ ಉಲ್ಟಾ ಹೊಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಬಸನಗೌಡ ಪಾಟೀಲ ಯತ್ನಾಳ ಅವರು ಗಂಭೀರ ಆರೋಪ ಮಾಡಿದ್ದಾರೆ. ಇಷ್ಟಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಮ್ಮನೆ ಕುಳಿತಿವೆ. ತಕ್ಷಣ ಯತ್ನಾಳ ಅವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಬೇಕು ಎಂದು ಕಿಡಿಕಾರಿದ್ದಾರೆ.
ನಾನು ಮುಖ್ಯಮಂತ್ರಿ ಅವರ ರಾಜೀನಾಮೆ ಕೇಳುವುದಿಲ್ಲ. ಮುಖ್ಯಮಂತ್ರಿ ರಾಜೀನಾಮೆ ಪಡೆಯುವುದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಪಕ್ಷದ ಗೌರವ ಉಳಿಸಿಕೊಳ್ಳುವುದು ಆ ಪಕ್ಷದ ಮುಖಂಡರಿಗೆ ಬಿಟ್ಟ ವಿಚಾರ. ಬಿಜೆಪಿ ಸರ್ಕಾರ ರಚನೆಗೊಂಡಿರುವುದೇ ಶಾಸಕರನ್ನು ಖರೀದಿಸುವುದರಿಂದ. ಈ ಸರ್ಕಾರದಲ್ಲಿ ಸಾಕಷ್ಟು ಹಗರಣಗಳು ನಡೆದಿವೆ. ಬಿಜೆಪಿ ರಾಜ್ಯಾಧ್ಯಕ್ಷರ ಕೈವಾಡವೂ ಭ್ರಷ್ಟಾಚಾರದಲ್ಲಿ ಇರುವ ಸಾಧ್ಯತೆ ಇದೆ ಎಂದು ದೂರಿದರು.
PublicNext
08/05/2022 04:05 pm