ಬೆಂಗಳೂರು: 'ಸ್ವ ಇಚ್ಛೆಯಿಂದ ಮತಾಂತರಗೊಳ್ಳುವ ಹಕ್ಕು ಸಂವಿಧಾನವೇ ನೀಡಿದೆ. ಇದರ ಹೊರತಾದ ಮತಾಂತರ ತಡೆಯಲು ಕಾನೂನು ಇದೆ. ಇರುವ ಕಾನೂನನ್ನು ಜಾರಿಗೆ ತರುವ ಪೊಲೀಸ್ ಇಲಾಖೆ ಮತ್ತು ತಪ್ಪು-ಒಪ್ಪುಗಳ ನ್ಯಾಯ ಒದಗಿಸುವ ನ್ಯಾಯಾಂಗದ ಮೇಲೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ನಂಬಿಕೆ ಇಲ್ಲವೇ?' ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.
'ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ. ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
'ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ, ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರೆಲ್ಲರೂ ಖಂಡಿಸಬೇಕು. ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಅಲ್ಪಸಂಖ್ಯಾತರು ಮತ್ತವರ ಪೂಜಾಸ್ಥಳಗಳ ಮೇಲೆ ದಾಳಿ ನಡೆಯವುದಕ್ಕೆ ದೇಶ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಚರ್ಚ್ ಗಳ ಮೇಲಿನ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ತರಾತುರಿಯ ಮತಾಂತರ ನಿಷೇಧ ಕಾಯ್ದೆ ಇಂತಹ ದಾಳಿಗೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವೇ ಬಸವರಾಜ್ ಬೊಮ್ಮಾಯಿ ಅವರೇ?'ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇನ್ನೊಂದು ಟ್ವೀಟ್‌ನಲ್ಲಿ ಅವರು, 'ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ? ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ, ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರೆಲ್ಲರೂ ಖಂಡಿಸಬೇಕು' ಎಂದಿದ್ದಾರೆ.
PublicNext
13/05/2022 04:04 pm